ಬೆಂಗಳೂರು, ಜ 24: ಮಹದಾಯಿ ಸಮಸ್ಯೆ ನಿವಾರಿಸುವಂತೆ ಒತ್ತಾಯಿಸಿ, ಕನ್ನಡಪರ ಒಕ್ಕೂಟ ಹಾಗೂ ರೈತ ಸಂಘಟನೆಗಳು ನಾಳೆ (ಜ 25 ) ಕರ್ನಾಟಕ್ ಬಂದ್ ಗೆ ಕರೆ ನೀಡಿದ್ದು, ಇದರಿಂದ ಹಲವು ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಖಾಸಗಿ ಶಾಲೆಗಳಿಗೆ ರಜೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿವೆ. ಬೆಂಗಳೂರು ವಿಶ್ವವಿದ್ಯಾಲಯ ಪದವಿ ಪರೀಕ್ಷೆಗಳನ್ನು ಮುಂದೂಡಿದೆ. ಮಹದಾಯಿ ಸಮಸ್ಯೆ ಇತ್ಯರ್ಥಕ್ಕೆ ಕರೆದಿರುವ ಬಂದ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಕೂಡಾ ಬೆಂಬಲ ಸೂಚಿಸಿದ್ದಾರೆ. ಆದರೆ ಬಸ್ಸು ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಬೆಂಗಳೂರು ನಗರದಲ್ಲಿ ಬಂದ್ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಅಥವಾ ಒಂದು ದಿನ ರಜೆ ತೆಗೆದುಕೊಳ್ಳುವಂತೆ ಕೆಲ ಐಟಿ ಕಂಪನಿಗಳು ತಮ್ಮ ಸಿಬ್ಬಂದಿಗೆ ಸೂಚಿಸಿವೆ. ಹೀಗಾಗಿ ನಾಳೆ, ಬಂದ್, ನಾಡಿದ್ದು, ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಸಿಕ್ಕಂತಾಗಿದೆ. ಮಹದಾಯಿ ಹೋರಾಟಕ್ಕೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ದೊರೆಯುವ ಸಾಧ್ಯತೆ ಹೆಚ್ಚಿದೆ.