ಮಂಗಳೂರು, ನ.25 (DaijiworldNews/AA): ಬಸವಶ್ರೀ ಪ್ರಶಸ್ತಿ ಪುರಸ್ಕೃತ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು 'ಕರಾವಳಿ ಸಾಧಕ ರತ್ನ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.), ಕಾಸರಗೋಡು ವತಿಯಿಂದ ಆಯೋಜಿಸಲಾಗಿರುವ 9ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ-2026 ಹಾಗೂ ಕೇರಳ-ಕರ್ನಾಟಕ ಸಾಹಿತ್ಯ ಉತ್ಸವದ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಕನ್ನಡ ಭಾಷೆ, ನಾಡು-ನುಡಿ, ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಪ್ರತಿಷ್ಠಾನವು ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
'ಕರಾವಳಿ ಸಾಧಕ ರತ್ನ' ಪ್ರಶಸ್ತಿಗೆ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರು ಆಯ್ಕೆಯಾಗಿದ್ದಾರೆ. ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನವೆಂಬರ್ 29ರಂದು ಮಾಜಿ ಸಿಎಂ ವೀರಪ್ಪ ಮೊಯಿಲಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ .ಖಾದರ್ ಅವರ ಗೌರವ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಎಸ್. ಜಗದೀಶ್ಚಂದ್ರ ಅಂಚನ್ ಅವರು ಕಳೆದ 36ವರ್ಷಗಳಿಂದ ಕ್ರೀಡಾ ಪತ್ರಿಕೋದ್ಯಮ ಹಾಗೂ ಬರವಣಿಗೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರು ಈ ವರೆಗೆ 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳು ಮತ್ತು ಅಂಕಣ ಬರಹಗಳನ್ನು ಬರೆದಿದ್ದಾರೆ.