ಉಡುಪಿ, ಜ 31 (DaijiworldNews/SM): ಇತ್ತೀಚಿಗೆ ಕೇಳಿ ಬರುತ್ತಿರುವ ಕೊರೊನಾ ವೈರಸ್ ನಿಂದ ಹರಡುವ ರೋಗದ ಕುರಿತಂತೆ ಸಾರ್ವಜನಿಕರು ಯಾವುದೇ ಆತಂಕ ಅಥವಾ ಭಯ ಪಡುವ ಅಗತ್ಯವಿಲ್ಲ. ಆದರೆ ರೋಗದ ಲಕ್ಷಣಗಳನ್ನು ತಿಳಿದುಕೊಂಡು ಈ ಬಗ್ಗೆ ಎಚ್ಚರ ಹೊಂದಿರಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಅವರು ಶುಕ್ರವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕದಲ್ಲಿ ಇದುವರೆಗೂ ಕೊರೊನಾ ವೈರಸ್ ಸೋಂಕಿತ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೂ ಸಹ ನೆರೆಯ ಕೇರಳದಲ್ಲಿ ಈಗಾಗಲೇ ಪ್ರಕರಣ ಪತ್ತೆಯಾಗಿರುವುದರಿಂದ ಜಿಲ್ಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಟ್ಟು ಭಯ ಪಡುವ ಅವಶ್ಯಕತೆಯಿಲ್ಲ. ಆದರೆ ಈ ವೈರಸ್ನ ಲಕ್ಷಣಗಳ ಕುರಿತು ಅರಿವು ಹೊಂದಿರುವುದು ಅವಶ್ಯಕ ಎಂದರು.
ಕೊರೊನಾ ವೈರಸ್ನ ಲಕ್ಷಣಗಳು ಮತ್ತು ರೋಗ ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಮೂಡಿಸುವ ನಿಟ್ಟಿನಲ್ಲಿ ಪೋಸ್ಟರ್ ಗಳನ್ನು ಮುದ್ರಿಸಿ ವಿತರಿಸುವಂತೆ ಹಾಗೂ ಗ್ರಾಮ ಪಂಚಾಯತ್ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ವಿದೇಶದಿಂದ ಅದರಲ್ಲೂ ಚೀನಾದಿಂದ ಆಗಮಿಸುವ ಜಿಲ್ಲೆಯ ಸಾರ್ವಜನಿಕರು ಸೂಕ್ತ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹಾಗೂ ರೋಗ ಲಕ್ಷಣ ಕಂಡು ಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ಕೊರೊನಾ ವೈರಸ್ ಹರಡುವುದನ್ನು ತಡೆಯುವ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ತುರ್ತು ಕಾರ್ಯಪಡೆ ರಚಿಸುವಂತೆ ಸೂಚನೆ ಬಂದಿದ್ದು, ಜಿಲ್ಲೆಯಲ್ಲಿ ಈಗಾಗಲೇ ತುರ್ತು ಕಾರ್ಯಪಡೆ ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಮಣಿಪಾಲದ ಆಸ್ಪತ್ರೆಯ ವೈದ್ಯರು ಸೇರಿದಂತೆ ವಿವಿಧ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಯಾವುದೇ ಭಯ ಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದರು.