ಮಂಗಳೂರು, ಫೆ 5 (DaijiworldNews/SM): ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ವೈರಸ್ ಕೇರಳಕ್ಕೆ ಎಂಟ್ರಿಯಾಗಿದೆ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಜನತೆ ಭೀತಿ ಪಡುವ ಅಗತ್ಯವಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮತ್ತು ನವಮಂಗಳೂರು ಬಂದರು ಮಂಡಳಿ ಬಳಿ ಈಗಾಗಲೇ ವಿದೇಶದಿಂದ ಬರುವ ಪ್ರಯಾಣಿಕರನ್ನು ನಾವು ಸ್ಕ್ರೀನಿಂಗ್ಗೊಳಪಡಿಸಿ ವೈದ್ಯಕೀಯ ಪರೀಕ್ಷೆ ಮಾಡುತ್ತಿದ್ದೇವೆ. ಈಗಾಗಲೇ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿರುವ ಚೀನಾದ ವಿದೇಶಿಗರು ಚೇತರಿಸಿಕೊಳ್ಳುತ್ತಿದ್ದಾರೆ. ಆದರೆ ಇವರಲ್ಲಿ ಯಾವುದೇ ಕೊರೊನಾ ರೋಗದ ಸೋಂಕು ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಮಾನ ನಿಲ್ದಾಣದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದೇವೆ. ನಗರದಿಂದ ಚೈನಾಕ್ಕೆ ಯಾವುದೇ ನೇರ ವಿಮಾನ ಇಲ್ಲದಿರುವ ಕಾರಣ ಜನ ಆತಂಕ ಪಡುವ ಅಗತ್ಯವಿಲ್ಲ ಎಂದರು. ಯಾವುದೇ ಭೀತಿ ಇದ್ದರೆ ಆರೋಗ್ಯಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು. ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಡಾ. ರಾಜೇಶ್ ಉಪಸ್ಥಿತರಿದ್ದರು.