ಹಾಸನ, ಫೆ 07 : ಜೈನಕಾಶಿ ಶ್ರವಣ ಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ, ಪುಷ್ಪಾರ್ಚನೆ ಮಾಡುವ ಮೂಲಕ ಮಹಾಮಜ್ಜನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ವಿದ್ಯುಕ್ತ ಚಾಲನೆ ನೀಡಿದರು. ಚಾವುಂಡರಾಯ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಪಾಲ ವಜುಭಾಯ್ ವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎ.ಮಂಜು, ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮುಂತಾದ ಗಣ್ಯರು ಹಾಜರಿದ್ದರು. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕವನ್ನು ನೋಡಲು ನೂರಾರು ದಿಂಗಂಬರ ಮುನಿಗಳು, ಆಚಾರ್ಯರು ಮತ್ತು ಮಾತಾಜಿಯವರು ಆಗಮಿಸಿದ್ದರು. ಇದಕ್ಕೂ ಮೊದಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ದಂಪತಿಯನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಸಿಎಂ ಸಿದ್ದರಾಮಯ್ಯ ಹಾಜರಿದ್ದು ಸ್ವಾಗತ ಕೋರಿದರು.