ಕರಾವಳಿ, ಫೆ 19 (DaijiworldNews/SM): ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಿಸುವಂತೆ ಆಗ್ರಹಿಸಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ.
ಕರಾವಳಿ ಭಾಗದ ಜನರ ಮಾತೃಭಾಷೆಯಾಗಿರುವ ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು. ಹಾಗೂ ಅದನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕೆಂದು ಕರಾವಳಿಗರಿಂದ ತೀವ್ರವಾದ ಆಗ್ರಹಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕರಾವಳಿ ಶಾಸಕ ವೇದವ್ಯಾಸ್ ಕಾಮತ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಕಚೇರಿಯಲ್ಲಿ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವೇದವ್ಯಾಸ್ ಕಾಮತ್, ಸುಮಾರು ೨೫೦೦ ವರ್ಷಗಳ ಇತಿಹಾಸ ಇರುವ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸುವ ಪ್ರಯತ್ನಕ್ಕೆ ಪೂರಕವಾಗಿ ರಾಜ್ಯ ಸರಕಾರ ತುಳುಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಅಗತ್ಯವಿದೆ ಎಂದಿದ್ದಾರೆ.