ಮಂಗಳೂರು, ಫೆ 27 (Daijiworld News/MB) : ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಮಾ.4 ರಿಂದ 23 ರವರೆಗೆ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ತೊಂದರೆ ಇಲ್ಲದೆ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ನಿಷೇಧಾಜ್ಞೆ ಜಾರಿ ಮಾಡಲು ಆದೇಶ ಹೊರಡಿಸಿದ್ದಾರೆ.
ನಿಷೇಧಿತ ವಲಯಗಳಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯನ್ನು ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಬೇರೆ ಯಾವುದೇ ರೀತಿಯಲ್ಲಿ ಉತ್ತರ ಬರೆದು ನೀಡುವುದು ಅಥವಾ ಬೇರೆ ಯಾವುದೇ ವಸ್ತುಗಳನ್ನು ಹಂಚುವುದು, ರವಾನೆ ಮಾಡುವುದು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ.
ಹಾಗೆಯೇ ನಿಷೇಧಿತ ಪ್ರದೇಶದಲ್ಲಿ ಯಾವುದೇ ಮಾರಕ ಆಯುಧಗಳನ್ನು ಹಾಗೂ ಸ್ಪೋಟಕ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿಗಳನ್ನು ರವಾನೆ ಮಾಡುವುದು ಅಥವಾ ತಿಳಿಸಲು ಸನ್ನೆ ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.
ಪರೀಕ್ಷೆ ಆರಂಭವಾಗುವ ಒಂದು ಗಂಟೆಗ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ನಿಷೇಧಾಜ್ಞೆ ಜಾರಿಯಲ್ಲಿರುವ ಪ್ರದೇಶಗಳಲ್ಲಿ ಸರ್ಕಾರದಿಂದ ಅಥವಾ ಸರ್ಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ ಹಾಗೂ ಪೊಲೀಸ್ ಅಧಿಕಾರಿಗಳು, ಬ್ಯಾಂಕ್, ಭದ್ರತಾ ಸಿಬ್ಬಂದಿ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಲಾಠಿ, ಶಸ್ತ್ರಾಸ್ತ್ರ ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.