ಶಿರ್ವಾ, ಮಾ 06 (DaijiworldNews/SM): ಹೊಳೆಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸಿ ಟಿಪ್ಪರ್ ಲಾರಿಯಲ್ಲಿ ಸಾಗಾಟ ನಡೆಸುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಟಿಪ್ಪರ್ ಲಾರಿ ಸಹಿತ ಓರ್ವನನ್ನು ಬಂಧಿಸಿರುವರ ಘಟನೆ ಶಿರ್ವಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಟಿಪ್ಪರ್ ಚಾಲಕ ಕಾಪು ಮಲ್ಲಾರ್ ಪಂಚಾಯತ್ ಬಳಿಯ ನಿವಾಸಿ ಹಂಝ(32) ಪ್ರಕರಣದ ಆರೋಪಿಯಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಕಾಪು ತಾಲೂಕಿನ 92 ಹೇರೂರು ಗ್ರಾಮದ ಕಲ್ಲುಗುಡ್ಡೆ ಕುದುರೆಕಟ್ಟೆ ಎಂಬಲ್ಲಿ ಹೊಳೆಯಿಂದ ಅಕ್ರಮವಾಗಿ ಮರಳನ್ನು ತೆಗೆಯುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಟಿಪ್ಪರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ.
ಪೊಲೀಸರನ್ನು ಕಂಡು ಟಿಪ್ಪರ್ ನಲ್ಲಿದ್ದ ಇಬ್ಬರು ಸ್ಥಳದಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅವರನ್ನು ಬೆನ್ನಟ್ಟಿ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೋರ್ವ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.
ಓರ್ವನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಶಿರ್ವ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುನ್ನಡೆಸಿದ್ದಾರೆ.