ಬಂಟ್ವಾಳ, ಮಾ 10 (DaijiworldNews/SM): ದುಬೈಯಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಯಲ್ಲಿ ಜ್ವರ ಹಾಗೂ ಅಧಿಕ ಉಷ್ಣಾಂಶ ಇದ್ದ ಕಾರಣ ಅವರನ್ನು ಕೊರೋನಾ ಭೀತಿಯಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬಳಿಕ ಆ ವ್ಯಕ್ತಿ ವೈದ್ಯಾಧಿಕಾರಿಗಳಿಗೆ ಪತ್ರ ಬರೆದುಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ ಅಲ್ಲಿಂದ ತೆರಳಿದ್ದಾರೆ. ಸೋಮವಾರ ಸಂಜೆ ಆ ವ್ಯಕ್ತಿ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದರು. ಇದೀಗ ಅವರನ್ನು ಬಂಟ್ವಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿಟ್ಲದಲ್ಲಿ ಶಂಕಿತ ಇರುವ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಜನತೆ ಭಯಭೀತರಾಗಿದ್ದರು. ಆದರೆ, ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ಬಳಿಕ ಜನತೆಯ ಭೀತಿ ದೂರವಾಗಿದೆ. ಇನ್ನು ಆಸ್ಪತ್ರೆಯಲ್ಲಿ ದಾಖಲಾಗಿರುವ ವ್ಯಕ್ತಿಯ ಮೇಲೆ ತೀವ್ರ ನಿಗಾ ಇರಿಸಲಾಗಿದೆ. 48 ಗಂಟೆಗಳ ಕಾಲ ಆ ವ್ಯಕ್ತಿಯ ಮೇಲೆ ನಿಗಾ ಇರಿಸಲಾಗಿದೆ. ಆ ವ್ಯಕ್ತಿಯ ಗಂಟಲು ದ್ರವದ ವೈರಾಣು ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದ್ದು, ಅದರ ವರದಿ 48 ಗಂಟೆಗಳಲ್ಲಿ ಸಿಗಲಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಬಂಟ್ವಾಳ ಆಸ್ಪತ್ರೆಯಲ್ಲಿ ಪ್ರತ್ಯೇಕ ನಾಲ್ಕು ಬೆಡ್ ಗಳ ಐಸೊಲೇಶನ್ ವಾರ್ಡ್ ಆರಂಭಿಸಲಾಗಿದೆ. ಶಂಕಿತ ವ್ಯಕ್ತಿಯನ್ನು ಅದರಲ್ಲಿರಿಸಿ ತೀವ್ರ ನಿಗಾ ವಹಿಸಲಾಗುತ್ತಿದೆ.
ಇನ್ನು ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ತನ್ನ ಪತ್ನಿ ಮನೆಯಲ್ಲಿ ಪತ್ತೆಯಾದ ಶಂಕಿತನನ್ನು ಆರಂಭದಲ್ಲಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿತ್ತು. ಆದರೆ, ಆ ವ್ಯಕ್ತಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಟ್ವಾಳ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.
ಇನ್ನು ಕೊರೋನಾ ವೈರಸ್ ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತೀವ್ರ ನಿಗಾ ವಹಿಸುತ್ತಿದೆ. ಸಾರ್ವಜನಿಕರು ಈ ಬಗ್ಗೆ ಭಯಪಡುವ ಅಗತ್ಯವಿಲ್ಲ. ಬದಲಿಗೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಾದ ಅಗತ್ಯತೆ ಇದೆ. ಯಾವುದೇ ತಪ್ಪು ಮಾಹಿತಿಗಳಿಗೆ ಕಿವಿಗೊಡದೆ, ಶಂಕಿತ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ವೈದ್ಯರನ್ನು ಭೇಟಿಯಾಗಿ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರಕಾರ ತಿಳಿಸಿದೆ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು, ಜನತೆ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕಾಗಿದೆ. ವಿದೇಶದಿಂದ ಆಗಮಿಸಿದವರಲ್ಲಿ ಅವರ ಆರೋಗ್ಯದಲ್ಲಿ ಏನಾದರೂ ಏರುಪೇರುಗಳು ಕಂಡುಬಂದಾಕ್ಷಣ ಸೂಕ್ತ ಪರೀಕ್ಷೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳುವುದು ಅಗತ್ಯವಾಗಿದೆ.