ಉಡುಪಿ, ಮಾ 10 (DaijiworldNews/SM): ಜಿಲ್ಲೆಯಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 9 ರ ವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಈ ಬಾರಿ 13028 ರೆಗ್ಯೂಲರ್, 484 ರೆಗ್ಯೂಲರ್ ಪುನರಾವರ್ತಿತ ವಿದ್ಯಾರ್ಥಿಗಳು, 376 ಖಾಸಗಿ ಮತ್ತು 146 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಸೇರಿದಂತೆ ಒಟ್ಟು 14034 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆಗಳ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 20 ಕ್ಲಸ್ಟರ್ ಸಹಿತ, 29 ಕ್ಲಸ್ಟರ್ ರಹಿತ ಮತ್ತು 2 ಖಾಸಗಿ ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 51 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ನಡೆಯಲಿರುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಲಾಗಿದ್ದು, ಜಿಲ್ಲಾ ಖಜಾನೆಯಿಂದ ಬಿಗಿಭದ್ರತೆಯಲ್ಲಿ, ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆ ವಿತರಿಸಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಪರೀಕ್ಷಾ ಸಿದ್ದತೆಗಳನ್ನು ಗಂಭೀರವಾಗಿ ತೆಗೆದುಕೊಂಡು, ಯಾವುದೇ ಲೋಪಗಳಿಲ್ಲದಂತೆ ಯಶಸ್ವಿಯಾಗಿ ನಿರ್ವಹಿಸಬೇಕು. ಅಕ್ರಮಗಳಿಗೆ ಎಡೆ ನೀಡದೆ ಎಲ್ಲಾ ಪರೀಕ್ಷೆಗಳು ಸಾಂಗವಾಗಿ ಮತ್ತು ವ್ಯವಸ್ಥಿತವಾಗಿ ನಡೆಯುವಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪರೀಕ್ಷೆಯ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ಸೆಕ್ಷನ್ 144 ಜಾರಿಗೊಳಿಸಲು ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ನೀಡಿದ ಜಿಲ್ಲಾಧಿಕಾರಿ ಜಗದೀಶ್, ಕಾನೂನನ್ನು ಉಲ್ಲಂಘಿಸಿದವರ ಮೇಲೆ ಕ್ರಮ ಜರುಗಿಸಲಾಗುವುದು.
ಪರೀಕ್ಷೆ ಕುರಿತು ವಾಟ್ಸಾಪ್ ಮೂಲಕ ಸುಳ್ಳು ಸುದ್ದಿ, ನಕಲಿ ಪ್ರಶ್ನೆ ಪತ್ರಿಕೆಗಳನ್ನು ಹರಡುವವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು. ಮಾಧ್ಯಮಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಮುನ್ನ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮಾಹಿತಿಯ ನಿಖರತೆಯನ್ನು ಖಚಿತ ಪಡಿಸಿಕೊಳ್ಳುವಂತೆ ತಿಳಿಸಿದರು. ಪರೀಕ್ಷಾ ಕೇಂದ್ರದೊಳಗಡೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಇದಕ್ಕಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸ್ವಾಧೀನಾಧಿಕಾರಿಯನ್ನು ನೇಮಿಸಲಾಗುವುದು ಎಂದ ಜಿಲ್ಲಾಧಿಕಾರಿ ಜಿ.ಜಗದೀಶ್, ಪರೀಕ್ಷಾ ಜಾಗೃತ ದಳದ ಅಧಿಕಾರಿಗಳು ನಿಯಮಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ, ಪರೀಶೀಲನೆ ನಡೆಸಿ, ಅಕ್ರಮ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡುವಂತೆ ಡಿಡಿಪಿಐ ಅವರಿಗೆ ಸೂಚಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಕ್ರಿಶ್ಚಿಯನ್ ಪ್ರೌಢಶಾಲೆಯ ಭದ್ರತಾ ಕೊಠಡಿಯಲ್ಲಿ ಇರಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಪ್ರತಿ ಪರೀಕ್ಷಾ ಕೇಂದ್ರಕ್ಕೂ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಜಾಗೃತ ದಳದ 2 ತಂಡಗಳನ್ನು ನಿಯೋಜಿಸಲಾಗಿದ್ದು, ತಾಲೂಕು ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಒಟ್ಟು 3 ತಂಡಗಳು ಪರೀಕ್ಷಾ ಸಮಯದಲ್ಲಿ ಶಾಲೆಗಳಿಗೆ ಭೇಟಿ ನೀಡಲಿವೆ. ಪ್ರತೀ ಕೇಂದ್ರಕ್ಕೂ ವೀಕ್ಷಕರನ್ನು ಮತ್ತು ಪ್ರಶ್ನೆ ಪತ್ರಿಕೆಗಳನ್ನು ಸುರಕ್ಷಿತವಾಗಿ ಸಾಗಿಸಲು ಮಾರ್ಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜ, ಪರೀಕ್ಷಾ ಕೇಂದ್ರಗಳಲ್ಲಿ ಭದ್ರತೆಗಾಗಿ, ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳ ಸುರಕ್ಷಿತ ಸಾಗಾಟಕ್ಕಾಗಿ ಅಗತ್ಯ ಪೋಲೀಸ್ ಸಿಬ್ಬಂದಿಗಳನ್ನು ನಿಯುಕ್ತಿಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಜಿಲ್ಲಾ ಖಜಾನಾಧಿಕಾರಿ ಸಾವಿತ್ರಿ ಮತ್ತು ಜಿಲ್ಲೆಯ ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.