ಮಂಗಳೂರು, ಮಾ.11 (DaijiworldNews/SM): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ನೇಮಕಗೊಂಡಿದ್ದಾರೆ. ಸಮಿತಿ ಕಾರ್ಯಾಧ್ಯಕ್ಷರುಗಳಾಗಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರನ್ನು ನೇಮಕಗೊಳಿಸಲಾಗಿದೆ. ಹಾಗೆಯೇ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಕಚೇರಿ ಮುಂಭಾಗ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು.
ವಿಜಯೋತ್ಸವದಲ್ಲಿ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್ ರೈ ಅವರು, ರಾಷ್ಟ್ರೀಯ ಕಾಂಗ್ರೆಸ್, ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ನೂತನ ನಾಯಕರನ್ನು ಆಯ್ಕೆ ಮಾಡಿದೆ. ಹಾಗಾಗಿ, ರಾಜ್ಯಾದ್ಯಾಂತ ಕಾಂಗ್ರೆಸ್ ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಸಂತಸ ತಂದಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಯನ್ನು ಮತ್ತೆ ಹಿಡಿಯಲಿದೆ. ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಹಾಗೆಯೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಡಿಕೆಶಿ ನೇತೃತ್ವದಲ್ಲಿ ಜಯಭೇರಿ ಬಾರಿಸಲಿದೆ. ಆ ಮೂಲಕ ಕರ್ನಾಟಕ ರಾಜ್ಯವನ್ನು ಬಿಜೆಪಿ ಮುಕ್ತ ರಾಜ್ಯವನ್ನಾಗಿ ಮಾಡಲು ಸಂಕಲ್ಪವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
ವಿಜಯೋತ್ಸವದಲ್ಲಿ, ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ವೇಳೆ, ಮನಪಾ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಮಾಜಿ ಮೇಯರ್ ಮಹಾಬಲ ಮಾರ್ಲ, ಮನಪಾ ಸದಸ್ಯರಾದ ಎಸಿ ವಿನಯ್ ರಾಜ್ ಮತ್ತಿತ್ತರರು ಉಪಸ್ಥಿತರಿದ್ದರು.