ಮಂಗಳೂರು, ಫೆ 19: ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸಿದ್ದು, ಈ ಹಿನ್ನೆಲೆ ಕರಾವಳಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪ್ರವಾಸ ಹಮ್ಮಿಕೊಂಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅವರನ್ನು ಸಾವಿರಾರು ಕಾರ್ಯಕರ್ತರು ಸ್ವಾಗತಿಸಲಿದ್ದಾರೆ. ನಂತರ ಸುಳ್ಯ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಫೆಬ್ರವರಿ 20 ರಂದು ಮುಂಜಾನೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ ಈ ಮೂಲಕ ರಾಜ್ಯದ ಕರಾವಳಿಯಲ್ಲಿ ಅಧಿಕೃತ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಸುಬ್ರಹ್ಮಣ್ಯದ ಕುಲ್ಕುಂದದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ.
ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಲಿರುವ ಶಾ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆಯಲಿರುವ ನವಶಕ್ತಿ ಸಂಗಮ ಕಾರ್ಯಕ್ರಮದಲ್ಲೂ ಬಾಗವಹಿಸಲಿದ್ದಾರೆ. ಕುಲ್ಕುಂದ ಮತ್ತು ಬಂಟ್ವಾಳದಲ್ಲಿ ನಡೆಯಲಿರುವ ನವಶಕ್ತಿ ಸಂಗಮದಲ್ಲಿ ಸೀಮಿತ ಕಾರ್ಯಕರ್ತರನ್ನು ಹೊರತುಪಡಿಸಿ, ಬೇರೆ ಯಾರಿಗೂ ಪಾಲ್ಗೊಳ್ಳುವ ಅವಕಾಶ ಇಲ್ಲ ಎಂದು ಹೇಳಲಾಗಿದೆ.
ಕರಾವಳಿಯಲ್ಲಿ ಬಿಜೆಪಿ ಸಂಸದರಿಂದ ಕೇರಳ ಮಾದರಿ ಪಾದಯಾತ್ರೆ ನಡೆಯಲಿದ್ದು, ಈ ವೇಳೆ ದುಷ್ಕರ್ಮಿಗಳ ದಾಳಿಗೆ ಬಲಿಯಾದ ಬಿಜೆಪಿ ಕಾರ್ಯಕರ್ತ ಕಾಟಿಪಳ್ಳದ ದೀಪಕ್ ರಾವ್ ಮನೆಗೆ ಅಶಮಿತ್ ಶಾ ಭೇಟಿ ನೀಡಲಿದ್ದಾರೆ.