ಮಂಗಳೂರು, ಮಾ 17(DaijiworldNews/SM): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದೆ. ತಪ್ಪು ಮಾಹಿತಿಗಳಿಂದಾಗಿ ಜನರು ಭಯಭೀತರಾಗಿದ್ದಾರೆ. ಆದರೆ, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಜನತೆ ಆತಂಕಗೊಳ್ಳುವ ಬದಲು ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮನವಿ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸುತ್ತೋಲೆ ಹೊರಡಿಸಿರುವ ಜಿಲ್ಲಾಧಿಕಾರಿಗಳು, ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈಗಾಗಲೇ ಎಲ್ಲಾ ಧರ್ಮಗಳ ಧರ್ಮಗುರುಗಳನ್ನು ಸಂಪರ್ಕಿಸಿ ತಿಳಿಸಲಾಗಿದೆ ಎಂದರು. ಇನ್ನು ಈ ನಡುವೆ ಸಾರ್ವಜನಿಕವಾಗಿ ನಡೆಯುವ ಯಕ್ಷಗಾನಗಳನ್ನು ಕೂಡ ಮುಂದೂಡುವಂತೆ ಅವರು ಸೂಚನೆ ನೀಡಿದ್ದಾರೆ.
ಇನ್ನು ವೈರಸ್ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಅಲ್ಲದೆ, ಈ ಬಗ್ಗೆ ವಹಿಸಬೇಕಾದ ಮುನ್ನೆಚ್ಚರಿಕೆಯ ಬಗ್ಗೆಯೂ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ. ಅವರು ಜಿಲ್ಲೆಯಲ್ಲಿ ಮನೆ ಮನೆ ಭೇಟಿ ಆರಂಭಿಸಿದ್ದಾರೆ. ಈಗಾಗಲೇ ವಿದೇಶದಿಂದ ಆಗಮಿಸಿದವರನ್ನು ಮನೆಯಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಹಾಗೂ ಅವರ ಆರೋಗ್ಯದ ಮೇಲೆ ನಿಗಾ ಇಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮಂಗಳವಾರದ ತನಕ 2047 ಮನೆಗಳಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಹಾಗೂ ಆರೋಗ್ಯ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಮಾರ್ಚ್ 16ರಂದು ಕಾಸರಗೋಡಿನ ವ್ಯಕ್ತಿಯಲ್ಲಿ ಕೊರೊನಾ ಕಂಡುಬಂದಿದ್ದು ಆ ವ್ಯಕ್ತಿ ಮಾರ್ಚ್ ೧೪ರಂದು ಮಂಗಳೂರು ವಿಮಾನ ನಿಲ್ದಾಣದ ಮೂಲಕ ಬರುವ ಸಂದರ್ಭ ಸ್ಕ್ರೀನಿಂಗ್ ಮಾಡಲಾಗಿದೆ. ಆದರೆ, ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಆದರೆ, ಕಾಸರಗೋಡಿಗೆ ತೆರಳಿದ ಬಳಿಕ ೨ ದಿನಗಳಲ್ಲಿ ಆ ವ್ಯಕಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಅಲ್ಲಿನ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ. ಹಾಗೂ ವಿಮಾನದಲ್ಲಿ ಬಂದಿರುವ ದ.ಕ. ಜಿಲ್ಲೆಯವರನ್ನು ಪತ್ತೆ ಹಚ್ಚಿ ಅವರನ್ನು ಮನೆಯಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ. ಜೊತೆಗೆ ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಮಾತ್ರವಲ್ಲದೆ, ಆರೋಗ್ಯ ಇಲಾಖೆ ಅಧಿಕಾರಿಗಳು ಅವರ ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿಗಳು ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದಾರೆ.
ಇನ್ನು ಈಗಾಗಲೇ ಭಾರತ ಸರಕಾರ ಆದೇಶ ಮಾಡಿರುವ ಪ್ರಕಾರ ಯುಎಇ, ಕತಾರ್, ಓಮನ್, ಕುವೈಟ್ ದೇಶಗಳಿಂದ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ಹದಿನಾಲ್ಕು ದಿನಗಳ ಕಾಲ ನಿಗಾದಲ್ಲಿರುವಂತೆ ಸೂಚನೆ ನೀಡಲಾಗಿದೆ. ಹಾಗೂ ಅಗತ್ಯವಿರುವ ಪ್ರಕರಣಗಳನ್ನು ವೈದ್ಯಕೀಯ ನಿಗಾದಲ್ಲಿರಿಸಲಾಗುವುದು ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಅವರ ಕುಟುಂಬಸ್ಥರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಮಾರ್ಚ್ 17ರ ಮಂಗಳವಾರದಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನಲ್ಲಿ ಕೊರೊನಾ ಸೊಂಕು ಹಾಗೂ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದಾರೆ. ಸಾರ್ವಜನಿಕರು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದೊಂದಿಗೆ ಸಂಪೂರ್ಣವಾಗಿ ಸಹಕರಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಭೀತರಾಗದಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.