ಕಾಸರಗೋಡು, ಮಾ 22 (DaijiworldNews/SM): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾಧ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.
ರವಿವಾರದಂದು ಮತ್ತೆ ಐವರಲ್ಲಿ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಕಾಸರಗೋಡಿನಲ್ಲಿ ಸೋಂಕಿತರ ಸಂಖ್ಯೆ ೧೯ಕ್ಕೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕಾರಣ ಜನರು ಗುಂಪು ಗುಂಪಾಗಿ ಓಡಾಡುವಂತಿಲ್ಲ ಎಂಬುವುದಾಗಿ ಜಿಲ್ಲಾಧಿಕಾರಿ ಸಜಿತ್ ಬಾಬು ಆದೇಶ ನೀಡಿದ್ದಾರೆ. ಮುಂದಿನ ಆದೇಶದ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇನ್ನು ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಜನತೆ ಎಚ್ಚರವಾಗುವ ಅಗತ್ಯತೆ ಇದೆ. ಅನಾವಶ್ಯಕವಾಗಿ ಜಿಲ್ಲೆಯ ಜನತೆ ಮನೆಯಿಂದ ಹೊರಗಡೆ ಬರಕೂಡದು. ತುರ್ತು ಅವಶ್ಯಕತೆ ಇದ್ದಲ್ಲಿ ಮಾತ್ರ ಜನರು ಮನೆಯಿಂದ ಹೊರಗಡೆಬರಬೇಕು. ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ಜನರು ಮನೆಯಿಂದ ಹೊರಗಡೆ ಬರದೆ ಸೋಂಕು ತಡೆಗೆ ಸಹಕಾರವನ್ನು ನೀಡಬೇಕಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಸೋಂಕು ದಿನದಿಂದ ದಿನಕ್ಕೆ ತೀವ್ರವಾಗುತ್ತಿರುವ ಹಿನ್ನೆಲೆ ಇದರ ನಿಯಂತ್ರಣದ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ. ಈ ಕಾರಣದಿಂದಾಗಿ ಜನರು ಸಹಕಾರ ನೀಡುವಂತೆ ಮನವಿ ಮಾಡಲಾಗಿದೆ.