ಮಂಗಳೂರು, ಮಾ 22 (DaijiworldNews/SM): ಕೊರೊನಾ (ಕೋವಿಡ್-19) ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಇದರ ಮುಂದುವರೆದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಾರ್ಚ್ 22ರ ರಾತ್ರಿಯಿಂದಲೇ ಜಾರಿಯಲ್ಲಿರುವಂತೆ ಸೆಕ್ಷನ್ ೧೪೪ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದು, ಮಾರ್ಚ್ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದಿದ್ದಾರೆ. ಸಾರ್ವಜನಿಕರು ಅತೀ ಅವಶ್ಯಕತೆ ಇದ್ದರಷ್ಟೇ ಮನೆಯಿಂದ ಹೊರಬರುವಂತೆ, ಇಲ್ಲದಿದ್ದಲ್ಲಿ ಮನೆಯಲ್ಲೇ ಉಳಿಯುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಇನ್ನು ಈಗಾಗಲೇ ಹೊರಡಿಸಿರುವ ಆದೇಶದಂತೆ ಯಾವುದೇ ಸಭೆ ಸಮಾರಂಭಗಳನ್ನು ನಡೆಸುವಂತಿಲ್ಲ.
ಇನ್ನು ಪ್ರಮುಖವಾಗಿ ಎಲ್ಲಾ ಅಂಗಡಿಗಳು ಬಂದ್ ಆಗಿರಲಿವೆ. ವಾಣಿಜ್ಯ ಸಂಕೀರ್ಣಗಳಲ್ಲಿ ಗ್ರಾಹಕ ಸೇವೆ ಇರುವುದಿಲ್ಲ. ವರ್ಕ್ ಶಾಪ್ ಗಳು ಬಂದ್ ಆಗಿರಲಿವೆ. ಕಾರ್ಮಿಕರ ಆಧಾರದಲ್ಲಿ ಕಾರ್ಯ ನಿರ್ವಹಿಸುವ ಕೈಗಾರಿಕೆಗಳು ಶೇಕಡಾ ೫೦ರಷ್ಟು ಕಾರ್ಮಿಕರೊಂದಿಗೆ ರೊಟೇಷನ್ ಆಧಾರದಲ್ಲಿ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ರಸ್ತೆ ಸಾರಿಗೆ ನಿಗಮ ಮತ್ತು ಖಾಸಗಿ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಸಂಪೂರ್ಣ ಸ್ಥಗಿತ. ಜಿಲ್ಲೆಯಲ್ಲಿ ಅಂತರ್ ಜಿಲ್ಲೆ ಹಾಗೂ ಅಂತರ್ ರಾಜ್ಯ ಸಾರಿಗೆ ಸಂಚಾರ ಬಂದ್ ಮಾಡಲಾಗಿದೆ. ದೇವಸ್ಥಾನ, ಚರ್ಚ್, ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಬೀಚ್, ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಈ ಎಲ್ಲಾ ಆದೇಶಗಳು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸಿ ರೋಗ ನಿಂಯಂತ್ರಣಕ್ಕೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.