ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ (54) ಹೃದಯಾಘಾತದಿಂದ ದುಬೈಯಲ್ಲಿ ಫೆ. ೨೫ ರ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ. ದುಬೈನಲ್ಲಿ ಕುಟುಂಬ ಸದಸ್ಯರ ವಿವಾಹ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪತಿ ಬೋನಿಕಪೂರ್ ಹಾಗೂ ಕಿರಿಯ ಪುತ್ರಿ ಖುಷಿ ಜತೆ ದುಬೈಗೆ ಹೋಗಿದ್ದರು. ಈ ಸಂದರ್ಭದಲ್ಲಿ ಹೃದಯಾಘಾತಗೊಂಡು ನಿಧನರಾಗಿದ್ದಾರೆ. 1963ರ ಆಗಸ್ಟ್ 13 ರಂದು ತಮಿಳುನಾಡಿನ ಶಿವಕಾಶಿಯಲ್ಲಿ ಜನಿಸಿದ್ದ ಶ್ರೀದೇವಿ 4ನೇ ವಯಸ್ಸಿನಲ್ಲೇ ತಮಿಳಿನ ‘ತುನೈವಾನ್’ ಮೂಲಕ ಚಿತ್ರರಂಗವನ್ನು ಪ್ರವೇಶಿಸಿದ್ದರು.13ನೇ ವಯಸ್ಸಿನಲ್ಲಿ ಜೂಲಿ ಚಿತ್ರದೊಂದಿಗೆ ಬಾಲಿವುಡ್ಗೆ ಎಂಟ್ರಿಕೊಟ್ಟ ಶ್ರೀದೇವಿ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಹಿಂದಿ, ತಮಿಳು, ತೆಲುಗು, ಮಲೆಯಾಳಂ ಮತ್ತು ಕನ್ನಡದಲ್ಲಿ ನಟಿಸುವ ಮೂಲಕ ಪಂಚಭಾಷಾ ಕಲಾವಿದೆಯಾಗಿ ಪ್ರಸಿದ್ಧಿ ಪಡೆದಿದ್ದರು. ಶ್ರೀದೇವಿ ಅವರ ಪಾರ್ಥಿವ ಶರೀರವನ್ನು ಸದ್ಯದಲ್ಲಿಯೇ ಭಾರತಕ್ಕೆ ಕರೆತರಲಾಗುವುದು ಎಂದು ಮೂಲಗಳು ತಿಳಿಸಿವೆ.