ಬೆಳ್ತಂಗಡಿ, ಮಾ 27 (DaijiworldNews/SM): ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಆತಂಕ ತೀವ್ರಗೊಂಡಿದೆ. ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ 21 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
ದುಬೈನಿಂದ ಬಂದಿದ್ದ ವ್ಯಕ್ತಿಯಲ್ಲಿ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಈತ ಮಾರ್ಚ್ 21ರಂದು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಕೆ.ಎಸ್. ಆರ್.ಟಿ.ಸಿ. ಬಸ್ ಮೂಲಕ ಆಗಮಿಸಿದ್ದ. ಊರಿಗೆ ಬಂದಿದ್ದ ಆತನಲ್ಲಿ ಜ್ವರ ಹಾಗೂ ಕೆಮ್ಮು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಮಾರ್ಚ್ 24ರಂದು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲ್ಯಾಬ್ ಟೆಸ್ಟಿಂಗ್ ಪ್ರಕಾರ ರಾಜ್ಯ ತಂಡದಿಂದ ಅನುಮತಿ ಪಡೆದು ವ್ಯಕ್ತಿಯ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಪರೀಕ್ಷಾ ವರದಿ ಮಾರ್ಚ್ 27ರಂದು ಲಭ್ಯವಾಗಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದಾಗಿ ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ. ಇನ್ನು ಸೋಂಕಿತ ವ್ಯಕ್ತಿಯ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾದಲ್ಲಿರಿಸಲಾಗಿದೆ. ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಆತನೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿಗಳ ಪತ್ತೆ ಕಾರ್ಯ ಮುಂದುವರೆದಿದೆ.