ಮಂಗಳೂರು, ಮಾ 28 (Daijiworld News/MSP):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾ. 28ರ ಇಂದು ಜಿಲ್ಲೆಯಲ್ಲಿ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ವಾಣಿಜ್ಯ ವ್ಯವಹಾರ ನಿಷೇಧಿಸಿ ಹಾಲು ಮತ್ತು ಜೌಷಧಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದರೂ, ಇಂದು ಬೆಳಗ್ಗೆ ಮಂಗಳೂರಿನ ಸೆಂಟ್ರಲ್ ಮಾರ್ಕೇಟ್ ನಲ್ಲಿ ಭಾರೀ ಜನಸ್ತೋಮ ಸಾಮಾನ್ಯವಾಗಿತ್ತು. ಮಾರುಕಟ್ಟೆಯಲ್ಲಿ ತರಕಾರಿ ಅಂಗಡಿಗಳು ಎಂದಿನಂತೆ ತೆರೆದಿತ್ತು.
ಇಂದು ಹಾಲು ಮತ್ತು ಜೌಷಧ ಬಿಟ್ಟು ಸಂಪೂರ್ಣ ಬಂದ್ ಎಂದು ಜಿಲ್ಲಾಡಳಿತ ಆದೇಶ ನೀಡಿದರೂ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ಕೊಡದ ವ್ಯಾಪಾರಸ್ಥರು ಮತ್ತು ನಾಗರೀಕರು ಮುಗಿಬಿದ್ದು ಸಾಮಾಗ್ರಿ ಖರೀದಿಸುತ್ತಿರುವುದು ಸಾಮಾನ್ಯವಾಗಿತ್ತು. ಜಿಲ್ಲಾಡಳಿತದ ಆದೇಶ ದಿಕ್ಕರಿಸಿ ಮಾರುಕಟ್ಟೆ ತೆರೆದ ವ್ಯಾಪಾರಸ್ಥರು ಎಂದಿನಂತೆ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡರು.
ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ವರದಿಯಾಗಿವೆ. ನೆರೆಯ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮತ್ತಷ್ಟು ಕಠಿಣ ಕ್ರಮಕ್ಕೆ ಮುಂದಾಗಿ ಈ ತೀರ್ಮಾನ ಕೈಗೊಳ್ಳಲಾಗಿತ್ತು.