ಮಂಗಳೂರು, ಮಾ 2: ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಗಳೂರಿನ ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ತೆರಿಗೆ ಹಣವನ್ನು ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ಮಾಹಿತಿ ಹಕ್ಕಿನಡಿಯಲ್ಲಿ ಸಿದ್ದರಾಮಯ್ಯ ಅವರ ತೆರಿಗೆ ಹಣ ದುರುಪಯೋಗ ಮಾಡಿರುವ ಬಗ್ಗೆ ಶಶಿಧರ್ ಶೆಟ್ಟಿ ಎಂಬುವವರು ದಾಖಲೆಗಳನ್ನು ಕಲೆ ಹಾಕಿದ್ದಾರೆ. ಈ ದಾಖಲೆಗಳ ಆಧಾರದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಮೂವರು ಸಚಿವರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
2017 ಅಕ್ಟೋಬರ್ 22ರಂದು ಬಂಟ್ವಾಳದಲ್ಲಿ ಸಿಎಂ ಅವರು ಮಿನಿ ವಿಧಾನಸೌಧ ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಮಾಡಿದ್ದರು. ಈ ಕಾರ್ಯಕ್ರಮದ ವೇದಿಕೆ, ಊಟೋಪಚಾರ, ಸಾರಿಗೆ, ಮೈಕ್, ಶಾಮಿಯಾನ ಮತ್ತು ಇತರ ಖರ್ಚುಗಳಿಗೆ ಸರ್ಕಾರಿ ತೆರಿಗೆ ಹಣವನ್ನು ಬಳಸಲಾಗಿದೆ ಕಾರ್ಯಕ್ರಮಕ್ಕೆ ಒಟ್ಟು 2,65,752 ರೂ. ಖರ್ಚು ಮಾಡುವ ಮೂಲಕ ಸಾರ್ವಜನಿಕರ ತೆರಿಗೆ ಹಣವನ್ನು ಪೋಲು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮಾತ್ರವಲ್ಲದೆ, ಈ ಕಾರ್ಯಕ್ರಮದ ಭಾಷಣದಲ್ಲಿ ಸಿಎಂ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಮಾಡಿದ್ದು ಸರಿಯಲ್ಲ. ಹೀಗಾಗಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಇಂಧನ ಸಚಿವ ಡಿಕೆ ಶಿವಕುಮಾರ್, ಅರಣ್ಯ ಸಚಿವ ರಮಾನಾಥ ರೈ, ಯುಟಿ ಖಾದರ್ ಅವರು ವೇದಿಕೆಯಲ್ಲಿ ಕಾಂಗ್ರೆಸ್ ಪರವಾಗಿ ಭಾಷಣವನ್ನು ಮಾಡಿದ್ದು ನಾಲ್ವರ ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಎಫ್ಐಆರ್ ದಾಖಲಿಸಲು ಅನುಮತಿ ಕೊಡುವಂತೆ ಮನವಿ ಸಲ್ಲಿಸಿದ್ದಾರೆ.