ಮಂಗಳೂರು, ಮೇ 06 (DaijiworldNews/SM): ಮಾರಕ ಕೋವಿಡ್-19 ಸೋಂಕಿನ ವಿರುದ್ಧ ನಾವೆಲ್ಲರೂ ಒಟ್ಟಾಗಿ ಹೋರಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ಸಿಗರು ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಈ ಕುರಿತು ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 40ದಿನಗಳಿಂದ ಬಿಜೆಪಿ ಕಾರ್ಯಕರ್ತರು ಕಾರ್ಮಿಕರಿರುವ ಸ್ಥಳಗಳಿಗೆ ಹೋಗಿ ಆಹಾರಗಳನ್ನು ನೀಡುವ ಕೆಲಸ ಮಾಡುತ್ತಿದೆ. ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಲು ವ್ಯವಸ್ಥೆಯನ್ನ ಮಾಡಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಈಗಾಗಲೇ 1,610 ಕೋಟಿ ರೂಪಾಯಿ ರಾಜ್ಯ ಸರ್ಕಾರ ಪ್ರಕಟಿಸಿದೆ. ಕಾರ್ಮಿಕರಿಗೆ ಸರ್ಕಾರ ಅನುದಾನವನ್ನು ಬಿಡುಗಡೆಗೊಳಿಸಿದೆ. ಇಂತಹ ಸಂದರ್ಭಗಳಲ್ಲಿ ಜನರಿಗೆ ವಿಶ್ವಾಸ ತುಂಬುವ ಕೆಲಸ ಮಾಡಬೇಕಾಗಿದೆ. ವಲಸೆ ಕಾರ್ಮಿಕರಿಗೆ ಪ್ರತಿಯೊಬ್ಬರಿಗೆ ಉಚಿತ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ ಎಂದರು. ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೆಲವೊಂದು ನಿರ್ಧಾರಗಳಿಂದ ಕೋವಿಡ್-19 ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.