ಮಂಗಳೂರು, ಮಾ 31: ವಿಮಾನ ನಿಲ್ದಾಣಗಳಲ್ಲಿ ನಡೆಸಲಾದ ಸ್ವಚ್ಛತಾ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಣ್ಣ ವಿಮಾನ ನಿಲ್ದಾಣಗಳ ಪೈಕಿ ದೇಶದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಅಧಿಕೃತ ಮಾಹಿತಿ ಬಂದಿದ್ದು, ಮಂಗಳೂರು ವಿಮಾನ ನಿಲ್ದಾಣ ಉಳಿದೆಲ್ಲಾ ವಿಮಾನ ನಿಲ್ದಾಣಗಳಿಗಿಂತ ಹೆಚ್ಚು ಅಂಕ ಪಡೆಯುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನವಾಗಿ ಆಯ್ಕೆಯಾಗಿದೆ. ಕೇರಳದ ತಿರುವನಂತಪುರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಸಮೀಕ್ಷೆ ನಡೆಸಿದ್ದು, ವಿಮಾನ ನಿಲ್ದಾಣದ ವಾಣಿಜ್ಯ ಮಳಿಗೆಗಳು, ರಸ್ತೆ ಸಂಪರ್ಕ, ಟರ್ಮಿನಲ್, ಪಾರ್ಕಿಂಗ್ ಏರಿಯಾ, ಶೌಚಾಲಯ, ಕಸ್ಟಮರ್ ಲಾಂಜ್ ಮುಂತಾದ ಕಡೆಗಳಲ್ಲಿ ಪರಿಶಿಲನೆ ನಡೆಸಿದ್ದರು. ಇದೀಗ ಅಧಿಕಾರಿಗಳು ನಡೆಸಿದ ಸ್ವಚ್ಛತೆಯ ಸಮೀಕ್ಷೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಣ್ಣ ನಿಲ್ದಾಣಗಳ ಪೈಕಿ ಪ್ರಥಮ ಸ್ಥಾನ ಪಡೆದಿದೆ.
ಏ.1ರಂದು ಹೊಸದಿಲ್ಲಿಯಲ್ಲಿ ನಡೆಯುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ 23ನೇ ವಾರ್ಷಿಕ ದಿನಾಚರಣೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿರ್ದೇಶಕ ವಿ.ವಿ.ರಾವ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.