ಬೆಂಗಳೂರು, ಮಾ 31: ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಅಮಿತ್ ಶಾರನ್ನು ಗಡಿಪಾರು ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕ್ಯಾತಮಾರಹಳ್ಳಿ ರಾಜು ಕುಟುಂಬಕ್ಕೆ 5 ಲಕ್ಷ ರೂ. ಸಾಲ ನೀಡಿ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಮಾತ್ರವಲ್ಲ ಶಾ ಕ್ರಿಮಿನಲ್ ರೀತಿ ವರ್ತಿಸುತ್ತಾರೆ. ಅಮಿತ್ ಶಾ ಮತ್ತು ಯಡಿಯೂರಪ್ಪ ಇಬ್ಬರೂ ಜೈಲಿಗೆ ಹೋಗಿ ಬಂದವರು. ಹೀಗಾಗಿ ಕ್ರಿಮಿನಲ್ ರೀತಿ ವರ್ತಿಸುವುದು ಎಂದು ಟೀಕಿಸಿದರು.
ಧರ್ಮದ ಹೆಸರಿನಲ್ಲಿ ಅಮಿತ್ ಶಾ ಮತಯಾಚನೆ ಮಾಡುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕಕ್ಕೆ ಬಂದು ಪದೇ ಪದೇ ಕಾನೂನು ಉಲ್ಲಂಘನೆ ಮಾಡುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತೆ ರಾಜ್ಯಕ್ಕೆ ಕಾಲಿಡದಂತೆ ನಿರ್ಬಂಧ ವಿಧಿಸಬೇಕೆಂದು ಒತ್ತಾಯಿಸಿದರು.