ಮಂಗಳೂರು, ಜೂ. 28 (DaijiworldNews/SM): ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರ ಒಂದೇ ದಿನ ಬರೋಬ್ಬರಿ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ರವಿವಾರದಂದು ಒಟ್ಟು 178 ಮಂದಿಯ ವರದಿ ಲಭ್ಯವಾಗಿದೆ. ಈ ಪೈಕಿ 81 ಮಂದಿಯ ವರದಿ ನೆಗೆಟಿವ್ ಆಗಿದೆ. ಉಳಿದಂತೆ 97 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ನಡುವೆ ರವಿವಾರದಂದು ಜಿಲ್ಲೆಯಲ್ಲಿ ಮೂವರು ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಇನ್ನು ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 663 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ 238 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು, ಉಳಿದವರು ಗುಣಮುಖರಾಗಿದ್ದಾರೆ.
ದ.ಕ. ಜಿಲ್ಲೆಯಲ್ಲಿ 6 ಮಂದಿ ಗುಣಮುಖ:
ಇನ್ನು ರವಿವಾರದಂದು ಜಿಲ್ಲೆಯಲ್ಲಿ ಆರು ಮಂದಿ ಕೊರೊನಾ ಮುಕ್ತರಾಗಿದ್ದಾರೆ. ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ಗುಣಮುಖರಾಗಿದ್ದು, ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ 422 ಮಂದಿ ಗುಣಮುಖರಾದಂತಾಗಿದೆ.