ಮಂಗಳೂರು, ಜು.01 (DaijiworldNews/SM): ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 3ರಿಂದ 5ರ ತನಕ ದ.ಕ. ಜಿಲ್ಲಾಧಿಕಾರಿ ಕಚೇರಿ ಬಂದ್ ಮಾಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ.
ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕು ಮತ್ತಷ್ಟು ಹರಡದಂತೆ ಜಿಲ್ಲಾಡಳಿತ ಆರೋಗ್ಯ ಇಲಾಖೆ ಹತ್ತು ಹಲವು ರೀತಿಯಲ್ಲಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಸಂಪೂರ್ಣ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಬಂದ್ ಮಾಡಿ ಆದೇಶ ನೀಡಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ಕಡ್ಡಾಯ ನಿರ್ಬಂಧ ಹೇರಲಾಗಿದೆ. ಯಾವುದೇ ಕಾರಣಕ್ಕೂ ಜುಲೈ 3ರಿಂದ 5ರ ತನಕ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ತೆರಳುವಂತಿಲ್ಲ. ಇನ್ನು ಈಗಾಗಲೇ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯನ್ನು ಬಂದ್ ಮಾಡಲಾಗಿದೆ. ಒಂದು ವಾರಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಇದೀಗ ಡಿಸಿ ಕಚೇರಿಯನ್ನು ಕೂಡ ಬಂದ್ ಮಾಡಲಾಗಿದೆ.