ಬೆಳ್ತಂಗಡಿ, ಜು 07 (Daijiworld News/MSP): ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಆಶಾ ಕಾರ್ಯಕರ್ತೆಯರ ಕರ್ತವ್ಯವನ್ನು ಸಚಿವ ಶ್ರೀರಾಮುಲು ವಿಶೇಷವಾಗಿ ಶ್ಲಾಘಿಸಿದ್ದಾರೆ. ಕೊರೊನಾದ ಸಂಕಷ್ಟದ ಸಮಯದಲ್ಲಿ , ಮಳೆ ಬಿಸಿಲು ಲೆಕ್ಕಿಸಿದೆ ಆಶಾ ಕಾರ್ಯಕರ್ತೆಯರು ಜನರಿಗೆ ಜಾಗೃತಿ ಮೂಡಿಸುತ್ತಿರುವ ವಿಚಾರವಾಗಿ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು ಅವರ ಕರ್ತವ್ಯ ಪ್ರಜ್ಞೆಯನ್ನು ಕೊಂಡಾಡಿದ್ದಾರೆ.

"ಕೊರೊನದಂತಹ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ವೈದ್ಯಕೀಯ ಸಿಬ್ಬಂದಿ ಪ್ರತಿ ಹಳ್ಳಿಹಳ್ಳಿಗಳಿಗೆ ತೆರಳಿ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ
ನಕ್ಸಲ್ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲ್ಲೂಕಿನ ಕೊರಗ ಕಾಲೋನಿಯಲ್ಲಿ ವಾಸಿಸುವ ಸುಮಾರು 40 ಕ್ಕೂ ಹೆಚ್ಚಿನ ಕುಟುಂಬಗಳಲ್ಲಿ ಕೆಲವರಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ. ಆ ಭಾಗದಲ್ಲಿ ಸುರಿಯುತ್ತಿರುವ ಮಳೆಯ ನಡುವೆ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಸಿಬ್ಬಂದಿ, ರಭಸವಾಗಿ ಹರಿಯುವ ನದಿಯನ್ನು ಕಿರಿದಾದ ಕಾಲುಸೇತುವೆಯ ಮೂಲಕ ಜೀವ ಕೈಯಲ್ಲಿ ಹಿಡಿದುಕೊಂಡು ದಾಟಿ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ಅಲ್ಲದೆ ರೋಗಗಳ ಕುರಿತು ಮುಂಜಾಗ್ರತೆ ವಹಿಸುವಂತೆ ಅರಿವು ಮೂಡಿಸಿ ಬಂದಿದ್ದಾರೆ.
ಅವರ ಕರ್ತವ್ಯ ನಿಷ್ಠೆ, ನಿಸ್ವಾರ್ಥ ಸೇವೆ ನಿಜಕ್ಕೂ ಮೆಚ್ಚುವಂಥದ್ದು " ಎಂದು ಟ್ವೀಟ್ ಮಾಡಿದ್ದಾರೆ.