ಉಡುಪಿ, ಜು. 08 (DaijiworldNews/MB) : ಜುಲೈ 7 ರ ಮಂಗಳವಾರದಿಂದ ಉಡುಪಿಯಲ್ಲಿ ಕಾರ್ಯನಿರ್ವಹಿಸಲು ಪ್ರಾರಂಭಿಸಿದ ಹೊಸ ಸರ್ಕಾರಿ ಕೋವಿಡ್ ಲ್ಯಾಬ್ ಅನ್ನು ಮೀನುಗಾರಿಕೆ, ಬಂದರು ಮತ್ತು ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.









ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರಂಭದಲ್ಲಿ ಕರ್ನಾಟಕದಲ್ಲಿ ಕೇವಲ ಒಂದು ಪರೀಕ್ಷಾ ಪ್ರಯೋಗಾಲಯ ಮಾತ್ರ ಇದ್ದವು. ಆದರೆ ಈಗ ಪರೀಕ್ಷಾ ಕೇಂದ್ರಗಳ ಸಂಖ್ಯೆ ಹೆಚ್ಚಾಗಿದೆ. ಈ ಹೊಸ ಪ್ರಯೋಗಾಲಯ ಆರಂಭದೊಂದಿಗೆ ಪರೀಕ್ಷಾ ಕೇಂದ್ರಗಳ ಸಂಖ್ಯೆ ಈಗ 82 ಕ್ಕೆ ಏರಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಜನರು ಆರಂಭದಲ್ಲಿ ಕೊರೊನಾ ಪರೀಕ್ಷೆಗಾಗಿ ಮಂಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಾಗಿತ್ತು. ಆದರೆ ಈಗ ಈ ಲ್ಯಾಬ್ ತೆರೆದಿರುವುದರಿಂದ ಪರೀಕ್ಷಾ ವರದಿಗಳು ವೇಗವಾಗಿ ಲಭ್ಯವಾಗಬಹುದು. ಜಿಲ್ಲೆಯಲ್ಲಿ 1,390 ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಆ ಪೈಕಿ ಮಹಾರಾಷ್ಟ್ರದಿಂದ ಆಗಮಿಸಿದ ಜನರ ಪ್ರಕರಣಗಳ 1,100 ಮೀರಿದೆ. ಹೊರ ರಾಜ್ಯದಿಂದ ಹಾಗೂ ಹೊರ ಜಿಲ್ಲೆಯಿಂದ ಹೆಚ್ಚಿನ ಜನರು ಇಲ್ಲಿಗೆ ಬರುತ್ತಿರುವುದರಿಂದ, ಅಗತ್ಯವನ್ನು ಮನಗಂಡ ಮುಖ್ಯಮಂತ್ರಿ, ವಿಶೇಷವಾಗಿ ಉಡುಪಿ ಜಿಲ್ಲೆಗೆ ಲ್ಯಾಬ್ಗೆ ಅನುಮೋದನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಕೊರೊನಾಗೆ ಚಿಕಿತ್ಸೆ ನೀಡಲು ಹಾಗೂ ಸೋಂಕು ನಿಯಂತ್ರಣಕ್ಕೆ ಉಡುಪಿ ಜಿಲ್ಲೆಯು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ. ಸೋಂಕಿನ ಹರಡುವಿಕೆಯನ್ನು ತಡೆಯುವಲ್ಲಿ ಪ್ರಯತ್ನ ಮಾಡುತ್ತಿರುವ ಜಿಲ್ಲಾ ಉಸ್ತುವಾರಿ ಸಚಿವರು, ಎಲ್ಲಾ ಶಾಸಕರು ಮತ್ತು ಜಿಲ್ಲಾಧಿಕಾರಿಗಳನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು ಆಂಬ್ಯುಲೆನ್ಸ್ ಮಾನಿಟರಿಂಗ್ ವ್ಯವಸ್ಥೆಯನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು.
ಆಸ್ಪತ್ರೆಗೆ ರೋಗಿಗಳು ದಾಖಲಾಗುವಲ್ಲಿ ವಿಳಂಬವನ್ನು ತಡೆಗಟ್ಟಲು ಈ ವ್ಯವಸ್ಥೆಯು ಸಹಾಯ ಮಾಡುತ್ತದೆ. ವಿಳಂಬವನ್ನು ತಡೆಗಟ್ಟಲು ಜಿಲ್ಲೆಯ ಎಲ್ಲಾ ಸರ್ಕಾರಿ ಆಂಬುಲೆನ್ಸ್ಗಳನ್ನು ಜಿಪಿಎಸ್ ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.
ಜಿಲ್ಲೆಯ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಬಗ್ಗೆ ವಿವರಗಳನ್ನು ನೀಡುವ ಹಾಸಿಗೆ ನಿರ್ವಹಣಾ ವ್ಯವಸ್ಥೆಯನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಶಾಸಕ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಸಿಇಒ ಪ್ರೀತಿ ಗೆಹ್ಲೋಟ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಮಧುಸೂಧನ್ ನಾಯಕ್, ಡಿಎಚ್ಒ ಡಾ.ಸುಧೀರ್ ಚಂದ್ರ ಸೂಡ, ಕೋವಿಡ್ -19 ಜಿಲ್ಲಾ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.