ಉಡುಪಿ, ಜು 21 (Daijiworld News/MSP): ಕೊರೊನಾ ವೈರಸ್ ಸೋಂಕಿನಿಂದ ಉಡುಪಿ ಜಿಲ್ಲೆಯಲ್ಲಿ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೂಲತಃ ಕೇರಳದ ಕಣ್ಣೂರು ನಿವಾಸಿಯಾಗಿರುವ 35 ವರ್ಷದ ಯುವಕ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಈತ ಜೂನ್ ತಿಂಗಳಿನಿಂದ ಕೆಎಂಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಸಾವನ್ನಪ್ಪಿದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಬಂದ ಕಾರಣ ಉಡುಪಿಯಲ್ಲೇ ಮೃತನ ಅಂತ್ಯ ಸಂಸ್ಕಾರ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಸುಧೀರ್ ಚಂದ್ರ ಸೂಡ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಅನ್ಸರ್ ಅಹಮದ್ ಮತ್ತು ಅವರ ತಂಡ ಮೃತರ ಅಂತ್ಯಕ್ರಿಯೆ ನೆರವೇರಿಸಲಿದೆ.
ಈ ನಡುವೆ ಉಡುಪಿಯ ಹೊಟೇಲ್ ಒಂದರ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಈಗಾಗಲೇ ಹೊಟೇಲ್ ನ್ನು ಮುಂಜಾಗ್ರತಾ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದೆ. ಈ ಹೊಟೇಲ್ ನಲ್ಲಿ 20 ಮಂದಿ ಸಿಬ್ಬಂದಿಗಳಿದ್ದು ಮೊದಲು ಹೊಟೇಲ್ ಮಾಲೀಕರಿಗೆ ಸೋಂಕು ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಸಿಬ್ಬಂದಿಗಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿತ್ತು. ಆದರೆ ಇದೀಗ 20 ಮಂದಿಯ ಪೈಕಿ 18 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದೆ.