ಉಡುಪಿ, ಜು 24 (DaijiworldNews/PY): ಜಿಲ್ಲೆಯಲ್ಲಿ ಜುಲೈ 30 ಮತ್ತು 31 ರಂದು ನಡೆಯುವ ಸಿ.ಇ.ಟಿ ಪರೀಕ್ಷೆಯನ್ನು ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ದತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿ.ಇ.ಟಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಬಾರಿಯ ಸಿಇಟಿ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 3912 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಇದಕ್ಕಾಗಿ ಜಿಲ್ಲೆಯಲ್ಲಿ 10 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಕೊರೊನಾ ಹಿನ್ನಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆ ಹೊರಡಿಸಿರುವ ಎಸ್.ಓ.ಪಿ ಪ್ರಕಾರ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಪಿಯು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪರೀಕ್ಷೆಯ ಮೊದಲು ಮತ್ತು ನಂತರ ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡುವಂತೆ ಸೂಚಿಸಿದರು.
ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷಿಸಲು ಥರ್ಮಲ್ ಸ್ಕ್ಯಾನರ್ನೊಂದಿಗೆ ಸಿಬ್ಬಂದಿಯನ್ನು ನಿಯೋಜಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಸಾಮಾಜಿಕ ಅಂತರ ಪಾಲಿಸಲು ರೋವರ್ಸ್ ಹಾಗೂ ರೇಂಜರ್ಸ್ ಸಹಕಾರ ಪಡೆಯುವಂತೆ ತಿಳಿಸಿದರು. ರೋಗ ಲಕ್ಷಣಗಳಿರುವ ಮತ್ತು ಕಂಟೈನ್ಮೆಂಟ್ ವಲಯದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡುವಂತೆ ಸೂಚಿಸಿದರು.
ಬೇರೆ ರಾಜ್ಯದಿಂದ ಸಿಇಟಿ ಪರೀಕ್ಷೆಗೆ ವಿದ್ಯಾರ್ಥಿಗಳು ಆಗಮಿಸಿದಲ್ಲಿ ಅವರನ್ನು ಕ್ವಾರಂಟೈನ್ಗೆ ಒಳಪಡಿಸಬೇಕಾದ ಅಗತ್ಯವಿಲ್ಲ ಆದರೆ ಅವರ ವಿವರಗಳನ್ನು ನೊಂದಾಯಿಸಿಕೊಂಡು ಪರೀಕ್ಷೆ ನಂತರ ತಮ್ಮ ರಾಜ್ಯಗಳಿಗೆ ಹಿಂದಿರುಗುವ ಬಗ್ಗೆ ಸಂಬಂಧಪಟ್ಟ ತಹಸೀಲ್ದಾರ್ಗಳು ಖಾತರಿಪಡಿಸಿಕೊಳ್ಳುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ನಿಯೋಜಿಸಿರುವ ಅಧಿಕಾರಿಗಳು, ಖಜಾನೆಯಲ್ಲಿ ನಿಗಧಿತ ಸಮಯಕ್ಕೆ ಪ್ರಶ್ನೆ ಪತ್ರಿಕೆ ಪಡೆದು ಪೊಲೀಸ್ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆ ವಿತರಿಸಿ, ಪರೀಕ್ಷೆ ನಂತರ ಜಿಲ್ಲಾ ಖಜಾನೆಯಲ್ಲಿ ಠೇವಣಿ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಪರೀಕ್ಷೆಗೆ ಹಾಜರಾಗಲು ಅನುಕೂಲವಾಗುವಂತೆ ಸಾಮಾಜಿಕ ಅಂತರ ಪಾಲನೆಯಾಗುವಂತೆ ಅಗತ್ಯ ಸಂಖ್ಯೆಯ ಬಸ್ಗಳನ್ನು ಓಡಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು, ಪಿಯು ಇಲಾಖೆಯ ಉಪ ನಿರ್ದೇಶಕ ಭಗವಂತ ಕಟ್ಟೀಮನಿ, ಡಿಡಿಪಿಯ ಶೇಷಶಯನ ಕಾರಿಂಜ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.