ಮಂಗಳೂರು, ಜು. 25 (DaijiworldNews/MB) : ಕೊರೊನಾ ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಭಾನುವಾರ ಲಾಕ್ಡೌನ್ನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಹಾಗೆಯೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಸೋಮವಾರದಿಂದ ಶನಿವಾರದವರೆಗೆ ರಾತ್ರಿ ಕರ್ಫ್ಯೂ ಹಾಗೂ ಭಾನುವಾರದ ಲಾಕ್ಡೌನ್ ಮುಂದುವರೆಯಲಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಉಭಯ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಇರಲಿದ್ದು, ಶನಿವಾರ ರಾತ್ರಿ 9 ಗಂಟೆಯಿಂದ ಭಾನುವಾರದ ಲಾಕ್ಡೌನ್ ಆರಂಭವಾಗಲಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಜುಲೈ 16 ರಿಂದ ಜುಲೈ 22 ವರೆಗೆ ಲಾಕ್ಡೌನ್ ಮಾಡಲಾಗಿತ್ತು. ಗುರುವಾರದಂದು ಈ ಲಾಕ್ಡೌನ್ ಕೊನೆಗೊಂಡಿದೆ.
ಕಳೆದ ಮಂಗಳವಾರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಯೂಟ್ಯೂಬ್ ಹಾಗೂ ಫೇಸ್ಬುಕ್ ಲೈವ್ ಮೂಲಕ ರಾಜ್ಯದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು ರಾಜ್ಯದಲ್ಲಿ ಇನ್ನು ಲಾಕ್ಡೌನ್ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
ಕೊರೊನಾ ನಿಯಮಗಳನ್ನು ಪಾಲಿಸಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು, ಮನೆಯಿಂದ ಹೊರ ಬರುವ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಮೂಲಕ ಈ ಕೊರೊನಾದ ನಡುವೆ ಬದುಕುವುದನ್ನು ಕಲಿಯಬೇಕು ಎಂದು ತಿಳಿಸಿದ್ದರು.