ಉಡುಪಿ, ಜು 27(DaijiworldNews/SM): ಮಧ್ಯಾಹ್ನ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರ ಅಧ್ಯಕ್ಷ ಸ್ಥಾನವನ್ನು ಸಂಜೆ ವಾಪಸ್ ಪಡೆಯಲಾಗಿದೆ. ಆದರೆ, ಏಕಾಏಕಿ ಈ ನಿರ್ಧಾರ ಯಾಕೆ ಎನ್ನುವ ಪ್ರಶ್ನೆ ಕಾಡಲಾರಂಭಿಸಿದ್ದು, ಸರಕಾರ ಈ ಬಗ್ಗೆ ಯಾವುದೇ ಕಾರಣ ನೀಡಿಲ್ಲ.

ಮಧ್ಯಾಹ್ನದ ವೇಳೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಕುರಿತಾಗಿ ಆದೇಶ ಹೊರಡಿಸಿದ್ದರು. ಆದರೆ, ಸಂಜೆ ಆದೇಶವನ್ನು ಹಿಂಪಡೆಯುವಂತೆ ಸೂಚಿಸಲಾಗಿದೆ. ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಹೊರಡಿಸಿರುವ ಟಿಪ್ಪಣಿಯಲ್ಲಿದ್ದ ಮೂವರ ಹೆಸರುಗಳನ್ನು ಕೂಡಲೆ ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಸರಕಾರದ ಈ ನಿರ್ಧಾರ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅದರಂತೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಲಾಗಿದ್ದ, ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರ ಶಾಸಕ ಲಾಲಾಜಿ ಮೆಂಡನ್ ಅವರ ಹೆಸರನ್ನು ಕೈಬಿಡಲಾಗಿದೆ.
ಉಳಿದಂತೆ, ರಾಜ್ಯ ಹಣಕಾಸು ಸಂಸ್ಥೆಗೆ ಅಧ್ಯಕ್ಷರನ್ನಾಗಿ ಸೂಚಿಸಲಾಗಿದ್ದ ಕೊಪ್ಪಳ ಜಿಲ್ಲೆ ಗಂಗಾವತಿ ಕ್ಷೇತ್ರದ ಶಾಸಕ ಪರಣ್ಣ ಈಶ್ವರಪ್ಪ ಮುನವಳ್ಳಿ, ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಲಾಗಿದ್ದ ಚಿತ್ರದುರ್ಗ ಕ್ಷೇತ್ರದ ಶಾಸಕ ಜಿ.ಹೆಚ್. ತಿಪ್ಪರೆಡ್ಡಿ ಹಾಗೂ ರಾಜ್ಯ ಸಮಾಜ ಕಲ್ಯಾಣ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಸೂಚಿಸಲಾಗಿದ್ದ ಕೊಪ್ಪಳ ಜಿಲ್ಲೆಯ ಕನಕಗಿರಿ ಶಾಸಕ ಬಸವರಾಜ್ ವಢೇಸೂರ್ ಅವರ ಹೆಸರುಗಳನ್ನು ಹಿಂಪಡೆಯಲಾಗಿದೆ.