ಮಂಗಳೂರು, ಏ.24: ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಏ.೨೭ ರಂದು ಬಂಟ್ವಾಳ ಕ್ಷೇತ್ರಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಏ.27 ರಂದು ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಬಿ.ಸಿ.ರೋಡ್ ಸಮೀಪದ ಜೋಡುಮಾರ್ಗ ಉದ್ಯಾನವನದಲ್ಲಿ ನಡೆಯುವ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದರು.
ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲೂ , ಕಾಂಗ್ರೆಸ್ ಪಕ್ಷ ವಿಜಯದ ನಗು ಬೀರಲಿದ್ದು, ಪಕ್ಷವೂ ಎಲ್ಲ ರೀತಿಯಲ್ಲಿ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಿದ್ದವಾಗಿದೆ ಎಂದರು. ಬಿಜೆಪಿಯಲ್ಲಿ ಭಿನ್ನಮತ ಹೊಗೆಯಾಡುತ್ತಿದ್ದು, ರಾಜ್ಯದ ಜನತೆಗೆ ಬಿಜೆಪಿ ಒಡೆದು ಹೋದ ಮನೆ ಎಂದು ತಿಳಿದಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಧಾನ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಇದೇ ವೇಳೆ ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ರಾಜನಾಥ ಕೋಟ್ಯಾನ್, ಇಬ್ರಾಹೀಂ ಕೋಡಿಜಾಲ್, ಯು.ಬಿ.ವೆಂಕಟೇಶ್ ಮುಂತಾದವರು ಉಪಸ್ಥಿತರಿದ್ದರು.