ಮಂಗಳೂರು, ಏ 27: 2014ರಲ್ಲಿ ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಸದ ನಳಿನ್ ಕುಮಾರ್ ಅವರ ವಿರುದ್ಧ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
2014ರ ಡಿಸೆಂಬರ್ 9 ರಂದು ಮಂಗಳೂರು ಹೊರವಲಯದ ಉಳಾಯಿಬೆಟ್ಟುವಿನಲ್ಲಿ ದತ್ತ ಮಾಲಾಧಾರಿಗಳ ಮೇಲಿನ ಹಲ್ಲೆ ಖಂಡಿಸಿ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಈ ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗಿಯಾಗಿದ್ದರು. ಆದರೆ, ಲೋಕಸಭಾ ಚುನಾವಣೆ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಸಂಸದ ನಳಿನ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಂಗಳೂರು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಈ ಕುರಿತು ವಿಚಾರಣೆ ನಡೆಯುತ್ತಿತ್ತು.
ಇದೀಗ "ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಹಾಗೂ ಇವುಗಳನ್ನು ಪುಷ್ಟೀಕರಿಸುವ ಸಾಕ್ಷ್ಯಗಳಿಲ್ಲ" ಎಂಬ ಕಾರಣಕ್ಕೆ ಪ್ರಕರಣ ರದ್ದುಗೊಳಿಸಲಾಗಿದೆ.
ಪ್ರಕರಣವನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿದ್ದು, ಪ್ರಕರಣದಲ್ಲಿ ಅರ್ಜಿದಾರರ ಪರ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿದ್ದಾರೆ.