ಮಂಗಳೂರು, ಏ 27: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಮುಂಬರುವ ಚುನಾವಣೆಗೆ ಕಾಂಗ್ರೆಸ್ ಅತೀ ಜತನದಿಂದ ತಯಾರಿಸಿರುವ ಚುನಾವಣಾ ಪ್ರಣಾಳಿಕೆಯನ್ನು ಇಂದು ಮಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆ ಮಾಡಲಿದ್ದಾರೆ. ಬಿ.ಸಿ.ರೋಡ್ ಸರ್ಕಲ್ ಸಮೀಪ ಗೋಲ್ಡನ್ ಮೈದಾನದಲ್ಲಿ ನಡೆಯುವ ಬಹಿರಂಗ ಸಭೆಯಲ್ಲಿ ಭಾಷಣ ಮಾಡಲಿರುವ ರಾಹುಲ್, ನಗರದಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಲಿದ್ದಾರೆ. ಇದೀಗ ಈ ಕಾರ್ಯಕ್ರಮಕ್ಕೆ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಆಗಮಿಸಿದ್ದು ಕಾರ್ಯಕರ್ತರಲ್ಲಿ ಉತ್ಸಾಹ ಮನೆ ಮಾಡಿದೆ. ಪೂಜಾರಿ ಆಗಮಿಸುತ್ತಿದ್ದ ವೇಳೆ ಕಾರ್ಯಕರ್ತರು ಜೈಕಾರ ಹಾಕಿ ಅವರನ್ನು ಸ್ವಾಗತಿಸಿದ್ದಾರೆ.
ಪ್ರಣಾಳಿಕೆಗಾಗಿ 15 ಮಂದಿಯ ತಂಡ 4 ತಿಂಗಳು ಶ್ರಮ ವಹಿಸಿದ್ದು, ಈ ಪ್ರಣಾಳಿಕೆಯಲ್ಲಿ ರಾಜ್ಯದ ಸರ್ವ ಜನರ ಸರ್ವಾಂಗೀಣ ಅಭಿವೃದ್ಧಿ, ರಾಜ್ಯದ ಸಮಗ್ರ ಅಭಿವೃದ್ಧಿ, ಯುವಕರಿಗೆ ಉದ್ಯೋಗ , ಮಹಿಳೆಯರ ರಕ್ಷಣೆ, ಶಿಕ್ಷಣ, ಆರೋಗ್ಯ, ಪರಿಸರ ರಕ್ಷಣೆ, ಶುಚಿತ್ವ, ಮೂಲಭೂತ ಸೌಕರ್ಯ ಇನ್ನಿತರ ಅತ್ಯಂತ ಪ್ರಮುಖ ವಿಚಾರಗಳ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಲಾಗಿದೆ.