ಉಡುಪಿ, ಆ 21 (DaijiworldNews/PY): ಪ್ರಕೃತಿ ವಿಕೋಪದಿಂದಾದ ಬೆಳೆ ನಾಶ, ಮನೆ ಹಾನಿ ನಷ್ಟದ ಬಗ್ಗೆ ಸೂಕ್ತವಾದ ಸಮೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದರು.


ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಕಾನೂನು ಸುವ್ಯವಸ್ಥೆ ಸೇರಿದಂತೆ ಕೊರೊನಾ ನಿಯಂತ್ರಣದ ಕ್ರಮಗಳು, ಪ್ರವಾಹ ಪರಿಸ್ಥಿತಿ ನಿಯಂತ್ರಣ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಮಾತುಕತೆ ನಡೆಸಿದರು. .
ಭಾರೀ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳು ನಾಶವಾಗಿದ್ದು, ನಷ್ಟವಾಗಿದೆ. ಈ ನಿಟ್ಟಿನಲ್ಲಿ ನಷ್ಟದ ಬಗ್ಗೆ ಪ್ರಾಥಮಿಕ ಹಂತದಲ್ಲಿ ಸಮೀಕ್ಷೆ ನಡೆಸಬೇಕು ಹಾಗೂ ಪರಿಹಾರ ವಿತರಿಸಬೇಕು. ಸರಿಯಾಗಿ ಸಮೀಕ್ಷೆ ಮಾಡದಿದ್ದಲ್ಲಿ, ರೈತರಿಗೆ ತೊಂದರೆಯಾಗುತ್ತದೆ. ಅಲ್ಲದೇ, ಭಾರೀ ನಷ್ಟವನ್ನು ಎದುರಿಸಬೇಕಾಗುತ್ತದೆ. ಈ ವಿಚಾರದ ಬಗ್ಗೆ ಅಧಿಕಾರಿಗಳು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಮಳೆಯ ಕಾರಣದಿಂದ ಜಿಲ್ಲೆಯಾದ್ಯಂತ 68 ಗ್ರಾಮಗಳಲ್ಲಿ ನಷ್ಟ ಸಂಭವಿಸಿದೆ ಎಂದು ಗಮನಿಸಿದ ಅವರು, ಬೆಳೆ ನಷ್ಟವನ್ನು ಅಂದಾಜು ಮಾಡುವ ನಿಟ್ಟಿನಲ್ಲಿ ಜಂಟಿ ಸಮೀಕ್ಷೆ ನಡೆಸಲು ಗ್ರಾಮ ಲೆಕ್ಕಾಧಿಕಾರಿ ಹಾಗೂ ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳ ಅಧಿಕಾರಿಗಳನ್ನು ಕೇಳಿದರು. ಪಶ್ಚಿಮ ಘಟ್ಟದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಪ್ರವಾಹ ಉಂಟಾಗಿದೆ. ಇದು ನದಿ ತೀರಗಳಲ್ಲಿನ ಭೂಮಿಯ ಸವೆತಕ್ಕೆ ಕಾರಣವಾಗಿದೆ. ಕಡಲ್ಕೊರೆತದ ಬಗ್ಗೆಯೂ ಕೂಡಾ ಸರಿಯಾಗಿ ಸಮೀಕ್ಷೆ ನಡೆಸಬೇಕು ಎಂದು ಸಲಹೆ ನೀಡಿದರು.
ನಷ್ಟದ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡುವಾಗ ಹಾಗೂ ಸಮೀಕ್ಷೆ ನಡೆಸುವಾಗ ಹಾನಿಗೊಳಗಾದ ಮನೆಗಳನ್ನು ಕೂಡಾ ಗಣನೆಗೆ ತೆಗೆದುಕೊಳ್ಳುವಂತೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಸಲಹೆ ನೀಡಿದರು. ಈ ವಿಚಾರವನ್ನು ಮೇಲ್ವಿಚಾರಣೆ ಮಾಡುವಂತೆ ತಹಶೀಲ್ದಾರ್ ಹಾಗೂ ಉಪ ವಿಭಾಗೀಯ ಅಧಿಕಾರಿಗಳಿಗೆ ತಿಳಿಸಿದರು.
ಕೊರೊನಾ ಸೋಂಕು ಬಗ್ಗೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಸೋಂಕಿತರಿಗೆ ಉತ್ತಮ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು. ಕೊರೊನಾ ಚಿಕಿತ್ಸೆಗಾಗಿ ಹೊರಗುತ್ತಿಗೆ ಪಡೆದ ವೈದ್ಯರು ಮತ್ತು ಇತರ ಸಿಬ್ಬಂದಿಗೆ ವೇತನ ಮತ್ತು ಇತರ ಭತ್ಯೆಗಳನ್ನು ವಿತರಿಸಲು ಸರ್ಕಾರ ಅನುದಾನವನ್ನು ಬಿಡುಗಡೆ ಮಾಡುತ್ತದೆ ಎಂದು ಅವರು ಭರವಸೆ ನೀಡಿದರು.
ಬಿತ್ತನೆ ಹಾಗೂ ರಾಸಾಯನಿಕ ಗೊಬ್ಬರಗಳ ದಾಸ್ತಾನು ಬಗ್ಗೆ ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ರೈತರು ತಮ್ಮ ಅಗತ್ಯಕ್ಕೆ ತಕ್ಕಂತೆ ಯೂರಿಯಾ ಗೊಬ್ಬರವನ್ನು ಪಡೆಯಬೇಕು ಎಂದು ಸೂಚಿಸಿದರು.
ಪ್ರಾಕೃತಿಕ ವಿಕೋಪ ಹಾಗೂ ಪ್ರವಾಹಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತದ ಸಹಯೋಗದೊಂದಿಗೆ ರಕ್ಷಣಾ ಹಾಗೂ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಕೆಲಸ ಮಾಡುವಂತೆ ಕೋಸ್ಟ್ ಗಾರ್ಡ್ ಪೊಲೀಸ್ ಪಡೆ ಮತ್ತು ಅಗ್ನಿಶಾಮಕ ದಳಕ್ಕೆ ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪಡ್ನೇಕರ್, ಉಪವಿಭಾಗಾಧಿಕಾರಿ ರಾಜು ಮತ್ತು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.