ಉಡುಪಿ, ಆ. 24(DaijiworldNews/HR): ಉಡುಪಿಯಲ್ಲಿ ಮೃತದೇಹದ ಬದಲಾವಣೆ ಮತ್ತು ವೈದ್ಯರ ನಿರ್ಲಕ್ಷ್ಯದಿಂದ ಯುವತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಳೆದ 6 ದಿನಗಳಿಂದ ಹೊಮ್ ಕ್ವಾರಂಟೈನ್ ನಲ್ಲಿರುವ ಕಾರಣ ಈ ಬಗ್ಗೆ ತನ್ನ ಫೇಸ್ ಬುಕ್ ನಲ್ಲಿ ವಿಡಿಯೋ ಹಾಕಿರುವ ಅವರು, 26 ವರ್ಷದ ಯುವತಿಯ ಸಾವಿಗೆ ಸಂಬಂಧಿಸಿದಂತೆ ಆಸ್ಪತ್ರೆಯಿಂದ ಏನಾದರೂ ತೊಂದರೆ ಇದ್ದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಮತ್ತು ಮೃತದೇಹ ಬದಲಾವಣೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಇನ್ನು ಮುಂದೆ ಈ ತರಹದ ಘಟನೆಗಳು ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಹೆಚ್ಚು ಜನರ ಕೋವಿಡ್ ಪರೀಕ್ಷೆಯನ್ನು ನಡೆಸುತ್ತಿದ್ದು ಇದರಿಂದ ಯಾವುದೇ ರೋಗದ ಲಕ್ಷಣಗಳು ಇಲ್ಲದ ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಯಲು ಮತ್ತು ಅವರನ್ನು ಮನೆಯಲ್ಲೇ ಐಸೋಲೇಷನ್ ಗೆ ಒಳಪಡಿಸಲು ಸಾಧ್ಯವಾಗುತ್ತದೆ. ಉಸಿರಾಟದ ತೊಂದರೆ, ಜ್ಜರದಂತಹ ಗಂಭೀರ ರೋಗಲಕ್ಷಣ ಕಂಡುಬಂದರೆ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಇದರಿಂದ ಸಾಧ್ಯವಾಗುತ್ತದೆ ಎಂದರು.
ಇನ್ನು ಯಾವುದೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರ ನಿಗದಿಪಡಿಸಿದಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಸೂಕ್ತ ದಾಖಲೆಗಳ ಸಮೇತ ದೂರು ನೀಡಿದರೆ ಅಂತವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಹಣ ಮಾಡುವ ಉದ್ದೇಶದಿಂದ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಅನೇಕ ವದಂತಿ ಹರಡಿಸುತ್ತಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1500 ಸರಕಾರದಿಂದ ನಿಗದಿಪಡಿಸಿದಷ್ಟು ಹಣವನ್ನು ಮಾತ್ರ ತೆಗೆದುಕೊಳ್ಳುತ್ತಿದೆ ಇದು ಯಾವುದೇ ಹಣ ಮಾಡುವ ಉದ್ದೇಶದಿಂದ ಮಾಡುವುದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭ್ರಷ್ಟಾಚಾರವಾಗುತ್ತಿದೆ ಎಂದು ಹಾಕುವವರು ದಾಖಲೆಗಳೊಂದಿಗೆ ಅಧಿಕಾರಿಗಳಿಗೆ ತೋರಿಸಿ ಅವರು ಕ್ರಮ ಕೈಗೊಳ್ಳುತ್ತಾರೆ ಎಂದರು.
ಇನ್ನು ಕೊರೋನಾ ಹೆಸರಿನಲ್ಲಿ ಆಸ್ಪತ್ರೆಗಳು ಹಣ ವಸೂಲಿ ಮಾಡುತ್ತಿದೆ ಎಂದೆಲ್ಲ ಸಾಮಾಜಿಕ ಜಾಲತಾಣದಲ್ಲಿ ಹಾಕುವವರು ದಾಖಲೆಗಳಿದ್ದರೆ ಮಾತ್ರ ಹಾಕಿ ಇಲ್ಲದಿದ್ದರೆ ಅಂತವರ ವಿರುದ್ಧ ನಿರ್ದಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಕಳೆದ 6 ತಿಂಗಳಿನಿಂದ ಕೊರೊನಾ ವಾರಿಯರ್ಸ್ ಜನಗಳಿಗಾಗಿ ದುಡಿಯುತ್ತಿದ್ದಾರೆ ಅವರಿಗೆ ಅವಮಾನ ಮಾಡಬಾರದು ಅವರ ಮನೋಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನು ಕಿಡಿಕೇಡಿಗಳು ಮಾಡಿತ್ತಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಜಿಲ್ಲಾಡಳಿತ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.