ಉಡುಪಿ, ಆ. 30 (DaijiworldNews/MB) : ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ.




ಅವರು ಶನಿವಾರ, ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು.
ಜಲ್ ಜೀವನ್ ಮಿಷನ್ ಯೋಜನೆಯಡಿ ರಾಜ್ಯದ ಎಲ್ಲಾ ಗ್ರಾಮೀಣ ಗ್ರಾಮ/ಜನವಸತಿಗಳಿಗೆ 2024 ರೊಳಗೆ ಮನೆಗಳಿಗೆ ನಳ್ಳಿ ಮೂಲಕ, ಪ್ರತಿ ವ್ಯಕ್ತಿಗೆ 55 ಎಲ್.ಪಿ.ಸಿ.ಡಿ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆಯಾಗಿದ್ದು, ಈ ಯೋಜನೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಗ್ರಾಮಗಳಿಗೆ ಪ್ರಥಮಾದ್ಯತೆಯಲ್ಲಿ ಸಂಪರ್ಕ ನೀಡಿ, ಈ ಯೋಜನೆ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ವ್ಯಾಪ್ತಿಯ ಸ್ಥಳಿಯ ಜನಪ್ರನಿಧಿಗಳು ಮತ್ತು ಕ್ಷೇತ್ರದ ಶಾಸಕರಿಗೆ ಯೋಜನೆಯ ಸಮಗ್ರ ವಿವರಗಳ ಮಾಹಿತಿಯನ್ನು ಪ್ರತ್ಯೇಕ ಸಭೆ ನಡೆಸಿ ನೀಡುವಂತೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದರು.
ಜಿಲ್ಲೆಯಲ್ಲಿ ಕೈಗೊಳ್ಳುವ ಕುಡಿಯುವ ಸಂಪರ್ಕ ನೀರು ಮತ್ತಿತರ ಯೋಜನೆಗಳಿಗೆ ನಿಗಧಿತ ಸಂಸ್ಥೆಯ ಪೈಪ್ ಗಳನ್ನು ಬಳಸದೇ , ಜಿಲ್ಲೆಯಲ್ಲಿ ಉತ್ಪಾದನೆಯಾಗುವ , ನಿಗಧಿತ ಗುಣಮಟ್ಟ ಹೊಂದಿರುವ ಪೈಪ್ ಗಳನ್ನು ಬಳಸುವಂತೆ ಶಾಸಕ ರಘುಪತಿ ಭಟ್ ಹೇಳಿದರು.
ಪ್ರಸಕ್ತ ಸಾಲಿನ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಡಿಯಲ್ಲಿ ಕೈಗೊಳಲಾಗುತ್ತಿರುವ ಕಾಮಗಾರಿಗಳನ್ನು ಸ್ಥಳಿಯ ಜಿಲ್ಲಾ ಪಂಚಾಯತ್ ಸದಸ್ಯರ ಗಮನಕ್ಕೆ ತಂದು ಅನುಷ್ಠಾನಗೊಳಿಸುವಂತೆ ತಿಳಿಸಿದ ಅಧ್ಯಕ್ಷ ದಿನಕರ ಬಾಬು ಹೇಳಿದರು.
ಶಾಲಾ ಕಟ್ಟಡಗಳ ಮೇಲೆ ರೂಫಿಂಗ್ ನಿರ್ಮಿಸುವ ಸಮಯದಲ್ಲಿ ಸ್ವಲ್ಪ ಎತ್ತರದಲ್ಲಿ ನಿರ್ಮಿಸಿದ್ದಲ್ಲಿ, ಆ ಪ್ರದೇಶದಲ್ಲಿ ವಿವಿಧ ಶೈಕ್ಷಣಿಕ ಚಟುವಟಿಕೆ ನಡೆಸಲು ಅನುಕೂಲವಾಗಲಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆವತಿಯಿಂದ ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ ತಿಳಿಸಿದರು.
ರೈತರ ಬೆಳೆ ಸಮೀಕ್ಷೆಯ ಅಂತಿಮ ದಿನಾಂಕವನ್ನು ಸೆಪ್ಟಂಬರ್ 23 ರೊಳಗೆ ವಿಸ್ತರಿಸಲಾಗಿದ್ದು, ಜಿಲ್ಲೆಯ ರೈತರು ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೋಥ್, ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಉಪಸ್ಥಿತರಿದ್ದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಕನ್ನಡ ಮಾಧ್ಯಮದ 11 ಮತ್ತು ಆಂಗ್ಲ ಮಾಧ್ಯಮದ 13 ವಿದ್ಯಾರ್ಥಿಗಳನ್ನು ಶನಿವಾರ ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಉಡುಪಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಧ್ಯಾಯರ ಸಂಘದ ವತಿಯಿಂದ, ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ಮರಣಿಕೆ ಮತ್ತು ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಜಿಲ್ಲಾ ಪಂಚಾಯತ್ ದಿನಕರ ಬಾಬು, ಶಾಸಕ ರಘುಪತಿ ಭಟ್, ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ ಪುತ್ರನ್, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗಡೆ ಮಾರಾಳಿ , ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗೆಹ್ಲೋಥ್, ಡಿಡಿಪಿಐ ಶೇಷಶಯನ ಕಾರಿಂಜ, ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್,ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.