ಮಂಗಳೂರು, ಸೆ. 01 (DaijiworldNews/SM): ಮಂಗಳೂರಿನಿಂದ ಚಿಕ್ಕಮಗಳೂರಿಗೆ ತೆರಳುವ ಚಾರ್ಮಾಡಿ ಘಾಟ್ ನಲ್ಲಿದ್ದ ರಾತ್ರಿ ಸಂಚಾರ ನಿಷೇಧ ತೆರವುಗೊಳಿಸಲಾಗಿದ್ದು, ಪ್ರಸ್ತುತ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ವಿಲ್ಲಂಪುರ ರಸ್ತೆಯಲ್ಲಿ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆಯೂ ಕೂಡ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸೆ.1ರಿಂದ ಮುಂದಿನ ಆದೇಶದವರೆಗೂ ದಿನದ 24 ಗಂಟೆಗಳ ಲಘು ವಾಹನಗಳ ಸಂಚಾರಕ್ಕೆ ಅನುಮತಿಸಲಾಗಿದೆ.