ಮಂಗಳೂರು, ಮೇ 05: ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಬಿರುಸಿನಿಂದ ಸಾಗಿದ್ದು, ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.


ಕಾಂಗ್ರೆಸ್ ಮುಖಂಡ ಶಶಿರಾಜ್ ಶೆಟ್ಟಿ ಕೊಳಂಬೆ ಸೇರಿದಂತೆ ಹಲವಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಉತ್ತರ ಪ್ರದೇಶದ ಗ್ರಾಮೀಣ ಆಭಿವೃದ್ಧಿ ಸಚಿವ ಮಹೇಂದ್ರ ಸಿಂಗ್ , ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಈ ಸಂದರ್ಭ ಕಾರ್ಕಳ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಸುನಿಲ್ ಕುಮಾರ್ ಮಂಗಳೂರಿಗೆ ಆಗಮಿಸಿ ಡಿ. ವೇದವ್ಯಾಸ ಕಾಮತ್ ಅವರ ಪರ ಪ್ರಚಾರ ನಡೆಸಿದ್ದಾರೆ.
ಉಜ್ಜೋಡಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸುನಿಲ್ ಕುಮಾರ್, ಕರಾವಳಿಯಲ್ಲಿ ಈ ಬಾರಿ ಅತ್ಯಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಸಿದ್ಧರಾಮಯ್ಯ ಸರಕಾರದ ದುರಾಡಳಿತದಿಂದ ಹೆಚ್ಚು ನೊಂದವರು ಕರಾವಳಿ ಜಿಲ್ಲೆಯವರು. ಹಾಗಾಗಿ ಇಲ್ಲಿನ ಮತದಾರ ಬಾಂಧವರು ಕಾಂಗ್ರೆಸ್ ಆಡಳಿತವನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ ಎಂದು ಹೇಳಿದರು.
ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಸೇರಿದಂತೆ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.