ಮಂಗಳೂರು, ಮೇ 10: ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಒಳಒಪ್ಪಂದ ಮಾಡಿಕೊಂಡಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಆರೋಪಿಸಿದ್ದಾರೆ.. ಪಕ್ಷದ ಕಚೇರಿಯಲ್ಲಿ ಮೇ. 10 ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಒಳ ಒಪ್ಪಂದ ಉಪಾಯ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ ಪಕ್ಷವೇ ಈ ಬಾರಿಯೂ ಬಹುಮತಗಳಿಸಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಎಲ್ಲೆಡೆಯೂ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ನೇರ ಪೈಪೋಟಿ ಇದೆ. ಕೆಲವೊಂದು ಸ್ಥಳದಲ್ಲಿ ಮಾತ್ರ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ತ್ರಿಕೋನ ಸ್ಪರ್ಧೆ ಕಂಡುಬರುತ್ತಿದೆ. ಅದರೂ ಕೂಡಾ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೈಗೊಂಡ ಅಭಿವೃದ್ದಿ ಪರ ಕೆಲಸಗಳು ಚುನಾವಣೆಯಲ್ಲಿ ವರದಾನವಾಗಲಿದೆ ಎಂದರು. ಕರಾವಳಿಯ ಮೂರು ಜಿಲ್ಲೆಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಒಟ್ಟು 19 ಸ್ಥಾನಗಳಲ್ಲಿ 15ನ್ನು ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಟಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ.ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.