ಮಂಗಳೂರು, ಸೆ. 23 (DaijiworldNews/SM): ಹಲವು ವರ್ಷಗಳಿಂದಿರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗುತ್ತಿಗೆ, ಹೊರ ಗುತ್ತಿಗೆ ನೌಕರರು, ವೈದ್ಯಕೀಯ, ಅರೆವೈದ್ಯಕೀಯ, ಕಚೇರಿ ಸಿಬ್ಬಂದಿಗಳ ಮುಷ್ಕರ ನಡೆಸಲು ನಿರ್ಧರಿಸಿದ್ದು, ಸರಕಾರಕ್ಕೆ ಕೋವಿಡ್ ವರದಿ ಸಲ್ಲಿಸದಿರಲು ನಿರ್ಧರಿಸಲಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘ ಪತ್ರ ಮುಖೇನ ತಿಳಿಸಿದ್ದು, ಸೆಪ್ಟೆಂಬರ್ 24ರಿಂದ ಬೇಡಿಕೆ ಈಡೇರುವ ತನಕ ಮುಷ್ಕರ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಜಿಲ್ಲಾ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುವ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿಗಳು ಹಲವಾರು ವರ್ಷಗಳಿಂದ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ವಹಿಸದೆ ಇರುವುದರಿಂದ ಅನಿವಾರ್ಯವಾಗಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕೋವಿಡ್-೧೯ ಹಾಗೂ ಇನ್ನಿತರ ರಾಷ್ಟ್ರೀಯ ಕಾರ್ಯಕ್ರಮಗಳ ವರದಿಗಳನ್ನು ಸರಕಾರಕ್ಕೆ ಸಲ್ಲಿಸದಿರಲು ಮತ್ತು ಸಾಂಕೇತಿಕ ಧರಣಿ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್-19 ಇರುವ ಹಿನ್ನೆಲೆಯಲ್ಲಿ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಅಲ್ಲದೆ, ಪ್ರತಿದಿನ ವರದಿ ತಯಾರಿಸಿ ಜಿಲ್ಲಾಡಳಿತಕ್ಕೆ ಮತ್ತು ರಾಜ್ಯಮಟ್ಟಕ್ಕೆ ನೀಡಬೇಕಾಗಿದೆ. ಸದ್ಯ ನೌಕರರು ಮುಷ್ಕರ ನಡೆಸುವ ಪರಿಣಾಮದಿಂದಾಗಿ ಕಚೇರಿ ಕೆಲಸಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರ ಬೇಡಿಕೆಗಳನ್ನು ಪರಿಗಣಿಸಬೇಕಾಗಿದೆ ಎಂದು ಮನವಿ ಮಾಡಲಾಯಿತು.