ಮಂಗಳೂರು, ಸೆ 25(DaijiworldNews/PY): ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ಮುಂತಾದ ಹಲವು ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿರುವ ತಿದ್ದುಪಡಿಗಳು ಬಂಡವಾಳಶಾಹಿಗಳ ಪರವಾಗಿದೆ ಎಂದು ಆರೋಪಿಸಿ ನಗರದಲ್ಲಿ ಸೆ.25ರ ಶುಕ್ರವಾರದಂದು ಹೆದ್ದಾರಿ ತಡೆ, ಪ್ರತಿಭಟನೆ ನಡೆಯಿತು.



ನಂತೂರು ವೃತ್ತದ ಬಳಿ ಬಿಜೆಪಿಯೇತರ ಪಕ್ಷಗಳ ಮುಖಂಡರು ಹಾಗೂ ರೈತ ಸಂಘಟನೆಗಳು ವಾಹನಗಳನ್ನು ತಡೆದು ಸಾಂಕೇತಿಕವಾಗಿ ರಸ್ತೆ ತಡೆ ನಡೆಸಿದ್ದು, ಬಳಿಕ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ರೈತರ ಹೆಸರಿನಲ್ಲಿ ಮತ ಯಾಚಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಇಂದು ಸರ್ಕಾರವು ರೈತರ ವಿರುದ್ಧ ಮಾಡಿದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸೇರಿದಂತೆ ಹಲವಾರು ಕಾಯ್ದೆಗಳಿಗೆ ಸುಗ್ರೀವಾಜ್ಞೆಗಳನ್ನು ಜಾರಿಗೆ ತಂದಿದೆ. ರೈತರ ಆರ್ಥಿಕ ಮೂಲವನ್ನು ನಾಶಮಾಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.
ಡಿವೈಎಫ್ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಅವರು ಮಾತನಾಡಿ, ರೈತ ವಿರೋಧಿ ಮಸೂದೆಗಳಿಗೆ ಹಲವಾರು ಸಂಸ್ಥೆಗಳು ರೈತರಿಗೆ ಸಂಪೂರ್ಣ ಬೆಂಬಲವನ್ನು ನೀಡಿವೆ. ಇಂದು ಇಡೀ ರಾಷ್ಟ್ರವು ರೈತರನ್ನು ಬೆಂಬಲಿಸಿ ಸರ್ಕಾರದ ವಿರುದ್ಧ ನಿಂತಿದೆ. ರೈತರು ನಮ್ಮ ರಾಷ್ಟ್ರದ ಬೆನ್ನೆಲುಬು, ಆದರೆ ಇಂದು ಅವರನ್ನು ನಿರ್ಲಕ್ಷಿಸಲಾಗಿದೆ. ನಮ್ಮ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.