ವಿಟ್ಲ, ಸೆ. 27 (DaijiworldNews/HR): ಹಿರಿಯ ಯಕ್ಷಗಾನ ಭಾಗವತ, ಯಕ್ಷಗುರು ಕರೋಪಾಡಿ ಗ್ರಾಮದ ತೆಂಕಬೈಲು ನಿವಾಸಿ ತಿರುಮಲೇಶ್ವರ ಶಾಸ್ತ್ರಿ (76) ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಶಾಸ್ತ್ರಿ ಯವರು ತನ್ನದೇ ಶೈಲಿಯ ಹಾಡುಗಾರಿಕೆಯಿಂದ ಕಲಾಭಿಮಾನಿಗಳ ಮನಗೆದ್ದಿದ್ದ ಅವರು ಉಡುಪಿ ಯಕ್ಷಗಾನ ಕಲಾರಂಗ, ದ.ಕ.ಜಿಲ್ಲಾ ರಾಜ್ಯೋತ್ಸವ, ಕುರಿಯ ವಿಟ್ಠಲ ಶಾಸ್ತ್ರಿ, ಸಂಪಾಜೆ ಡಾ.ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ, ಪದ್ಯಾಣ, ಪಟ್ಟಾಜೆ, ದಿವಾಣ ಪ್ರಶಸ್ತಿಗಳಲ್ಲದೆ ಹಲವು ಪುರಸ್ಕಾರ, ಸಮ್ಮಾನಗಳಿಗೆ ಭಾಜನರಾಗಿದ್ದರು.
ಇನ್ನು 1944ರಲ್ಲಿ ಪ್ರಸಿದ್ಧ ಚಕ್ರಕೋಡಿ ಮನೆತನದ ತೆಂಕಬೈಲು ಕೃಷ್ಣ ಶಾಸ್ತ್ರಿ ಸಾವಿತ್ರಿಯಮ್ಮ ದಂಪತಿಯ ಪುತ್ರರಾಗಿ ಜನಿಸಿದ ಶಾಸ್ತ್ರಿಯವರು ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ತೆಂಕಬೈಲು ಎಂಬಲ್ಲಿ ವಾಸಿಸುತ್ತಿದ್ದರು.
ಪೆರ್ಲದ ಶ್ರೀ ಪಡ್ರೆ ಚಂದು ಯಕ್ಷಗಾನ ತರಬೇತಿ ಕೇಂದ್ರದ ಹಿಮ್ಮೇಳ ಅಧ್ಯಾಪಕರಾಗಿ ಹಲವಾರು ಶಿಷ್ಯರನ್ನು ಹೊಂದಿದ್ದ ತಿರುಮಲೇಶ್ವರ ಶಾಸ್ತ್ರಿ ಹವ್ಯಾಸಿ ಭಾಗವತರಾಗಿಯೂ, ಕೆಲ ವರ್ಷ ವೃತ್ತಿ ಮೇಳಗಳಲ್ಲಿ ಭಾಗವತರಾಗಿಯೂ ಸೇವೆ ಸಲ್ಲಿಸಿದ್ದಾರೆ.