ಬೆಂಗಳೂರು, ಮೇ 14: ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಕಾರ್ಯಕ್ಕಾಗಿ ರಾಜ್ಯದಲ್ಲಿ ಒಟ್ಟು 38 ಮತ ಎಣಿಕೆ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದ್ದು, ಪೂರ್ವ ನಿಗದಿಯಂತೆ ಎಲ್ಲ ಕೇಂದ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಸ್ಪಷ್ಟ ಚಿತ್ರಣ ಲಭ್ಯವಾಗುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಮುಖ್ಯಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ವಿಕಾಸಸೌಧದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮತಯಂತ್ರಗಳನ್ನು ಸಂಗ್ರಹಿಸಲಾಗಿರುವ ಕೇಂದ್ರಗಳಲ್ಲಿ ಹೆಚ್ಚಿನ ಸುರಕ್ಷತೆಗಾಗಿ ಅರೆಸೇನಾ ಪಡೆ, ಕೇಂದ್ರ ಮೀಸಲು ಪಡೆಯ ಶಸ್ತ್ರ ಸಜ್ಜಿತ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಮತಯಂತ್ರಗಳಿರುವ ಸ್ಟ್ರಾಂಗ್ ರೂಂಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, 24 ಗಂಟೆ ಕಟ್ಟೆಚ್ಚರ ವಹಿಸಲಾಗುತ್ತಿದೆ. ಮತ ಎಣಿಕೆ ದಿನ ಕೇಂದ್ರಗಳ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗುವುದು ಎಂದು ಸಂಜೀವ್ ಕುಮಾರ್ ತಿಳಿಸಿದರು.