ಪುತ್ತೂರು, ಮೇ 15: ಬಿಜೆಪಿಯ ಪ್ರಯೋಗ ಶಾಲೆ ಎಂದೇ ಕರೆಯಲಾಗುತ್ತಿರುವ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಸಂಜೀವ ಮಠಂದೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಆರ್.ಎಸ್.ಎಸ್ ಹಾಗೂ ಬಿಜೆಪಿ ಸಂಘಟನಾ ಶಕ್ತಿ ಈ ಕ್ಷೇತ್ರದಲ್ಲಿ ಬಲಿಷ್ಠವಾಗಿದೆ. ಇಷ್ಟಾದರೂ, ಈ ಕ್ಷೇತ್ರದಲ್ಲಿ ಸತತವಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಿತ್ತು. ಮಾತ್ರವಲ್ಲ, ಕಾಂಗ್ರೆಸ್ ಪಕ್ಷದ ಗೆಲುವು ಬಿಜೆಪಿಗೆ ಶಾಕ್ ನೀಡುತ್ತಿತ್ತು. ಕಳೆದ ಬಾರಿಯ ಚುನಾವಣೆಯಲ್ಲಿ ಶಕುಂತಲಾ ಶೆಟ್ಟಿ ಕಾಂಗ್ರೆಸ್ ನಲ್ಲಿ ಸ್ಪರ್ಧಿಸಿ ಗೆಲ್ಲುವ ಮೂಲಕ ಬಿಜೆಪಿ ಪ್ರಯೋಗ ಶಾಲೆಯಲ್ಲೇ ಪ್ರಯೋಗ ನಡೆಸಿ ಯಶಸ್ವಿಯಾಗಿದ್ದರು.ಆದರೆ, ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ವಿರುದ್ಧ ಸ್ಪರ್ಧಿಸಿದ್ದ ಸಂಜೀವ ಮಠಂದೂರು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಾರಿ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ಇದೀಗ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿ ಸಂಜೀವ ಮಠಂದೂರು ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ವಿರುದ್ಧ ಸಂಜೀವ ಮಠಂದೂರು ಈ ಬಾರಿ ಸ್ಪರ್ಧಿಸಿದ್ದು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯ ಸಾಧಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಸಂಜೀವ ಮಠಂದೂರು ಅವರಿಗೆ ಒಟ್ಟು 89145 ಮತಗಳು ಬಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ 70199ಮತಗಳನ್ನಷ್ಟೇ ಪಡೆಯಲು ಶಕ್ತರಾಗಿದ್ದಾರೆ.