ಬಂಟ್ವಾಳ, ಮೇ 15: ದಕ್ಷಿಣ ಕನ್ನಡ ಜಿಲ್ಲೆಯ ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಂಟ್ವಾಳ ಕ್ಷೇತ್ರದಿಂದ ಸತತ ಏಳು ಬಾರಿ ಸ್ಪರ್ಧಿಸಿ, ಆರು ಸಲ ಗೆಲುವು ಕಂಡಿರುವ ಕಾಂಗ್ರೆಸ್ಸಿನ ಹಿರಿಯ ನಾಯಕ, ಹಾಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಎಂಟನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದರು. ಇದೀಗ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಸಚಿವ ರಮಾನಾಥ ರೈ ಎರಡನೇ ಬಾರಿಗೆ ಸೋಲಾಗಿದೆ.
ಈ ಬಾರಿ ಸಚಿವ ರಮಾನಾಥ ರೈ ವಿರುದ್ಧ ಕಣಕ್ಕೆ ಇಳಿದಿದ್ದ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು 15971 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ರಾಜೇಶ್ ನಾಯ್ಕ್ ಉಳಿಪಾಡಿ ಗುತ್ತು ಅವರಿಗೆ ಒಟ್ಟು 69177 ಮತಗಳು ದೊರಕಿದರೆ, ಕಾಂಗ್ರೆಸ್ ಅಭ್ಯರ್ಥಿ ಸಚಿವ ರಮಾನಾಥ ರೈ 53283 ಮತಗಳನ್ನು ಪಡೆದು ಸೋಲುಂಡಿದ್ದಾರೆ.
2013 ರ ಚುನಾವಣೆಯಲ್ಲಿ ರಮಾನಾಥ ರೈ ವಿರುದ್ಧ ಕಣಕ್ಕೆ ಇಳಿದಿದ್ದ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು 63815 ಮತಗಳನ್ನು ಪಡೆದಿದ್ದರು. ರಮಾನಾಥ ರೈ 81665 ಪಡೆದು ಜಯ ಸಾಧಿಸಿದ್ದರು. ಆದರೆ ಈ ಬಾರಿ ರೈ ವಿರುದ್ಧ ಉಳಿಪಾಡಿಗುತ್ತು ಭರ್ಜರಿ ಗೆಲುವು ಸಾಧಿಸಿದ್ದಾರೆ.