ಮಂಗಳೂರು, ಅ. 08 (DaijiworldNews/SM): ವಿದೇಶದಿಂದ ಭಾರೀ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದ್ದು, ಚಿನ್ನ ಸಹಿತ ಆರೋಪಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಕಾಸರಗೋಡು ಮೂಲದ ಸುಮೇಶ್ ಬಂಧಿತ ಆರೋಪಿಯಾಗಿದ್ದು, ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಸುಮೇಶ್ ದುಬೈನಿಂದ ಬಂದ ಏರ್ ಇಂಡಿಯಾ ವಿಮಾನದಲ್ಲಿ ಮಂಗಳೂರಿಗೆ ತಲುಪಿದ್ದ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತಪಾಸಣೆ ನಡೆಸುವ ವೇಳೆ ಆರೋಪಿ ಎಲೆಕ್ಟ್ರಿಕ್ ಕುಕ್ಕರ್ ನಲ್ಲಿರಿಸಿ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಬರೋಬ್ಬರಿ 25,45,920 ರೂ. ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.