ಉಡುಪಿ, ಅ. 12 (DaijiworldNews/PY): ಎಲ್ಲಾ ಇಲಾಖೆಗಳಲ್ಲಿ ಕಾರ್ಯದೊತ್ತಡ ಸಾಮಾನ್ಯವಾಗಿದ್ದು ವೇಗದ ಕಾರ್ಯಶೈಲಿಯನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯತೆಯಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ವತಿಯಿಂದ, ಉಡುಪಿ ಜಿಲ್ಲಾ ಪಂಚಾಯತ್ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ, ವರ್ಗಾವಣೆ ಹೊಂದಿರುವ ಪ್ರೀತಿ ಗೆಹಲೋತ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸ್ವಚ್ಚತೆ ಮತ್ತು ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರೀತಿ ಗೆಹಲೋತ್ ಅವರು ಸ್ಮರಣೀಯ ಕಾರ್ಯಗಳನ್ನು ಮಾಡಿದ್ದು ಕೊರೊನಾ ನಿರ್ವಹಣೆಯಲ್ಲಿ ಸಮನ್ವಯದಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.
ನಿರ್ಗಮಿತ ಜಿ.ಪಂ ಸಿಇಓ ಪ್ರೀತಿ ಗೆಹಲೋತ್ ಮಾತನಾಡಿ, ಎಲ್ಲಾ ಯೋಜನೆಗಳು ಯಶಸ್ವಿಯಾಗಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಉತ್ತಮ ಸಹಕಾರ ಸಿಕ್ಕಿದೆ ಎಂದು ತಿಳಿಸಿದರು. ಉಡುಪಿ ಜಿಲ್ಲೆಯು ಸಾಧನೆಗೆ ಪೂರಕವಾದ ವಾತಾವರಣವನ್ನು ಹೊಂದಿದ್ದು, ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ರಾಜ್ಯಕ್ಕೆ ಮಾದರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಮಾತನಾಡಿ, ಎಲ್ಲಾ ಅಧಿಕಾರಿಗಳ ಸಹಕಾರದೊಂದಿಗೆ ಉಡುಪಿಯ ಯಶಸ್ಸಿನ ಮಾದರಿಯನ್ನು ಇನ್ನಷ್ಟು ಉತ್ತಮಪಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು.
ಪಿಡಿಓ ಸಂಘ ಹಾಗೂ ಪಂಚಾಯತ್ ರಾಜ್ ನೌಕರರ ಶ್ರೇಯಾಭಿವೃದ್ಧಿ ಸಂಘದ ವತಿಯಿಂದ ನಿರ್ಗಮಿತ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರನ್ನು ಸನ್ಮಾನಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ಮಂಜುನಾಥ ಶೆಟ್ಟಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಮುಖ್ಯ ಲೆಕ್ಕಾಧಿಕಾರಿ ಕೆ.ಜಿ.ಭಟ್, ಯೋಜನಾ ನಿರ್ದೇಶಕ ಗುರುದತ್, ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮೋಹನ್ ರಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ, ಆರ್.ಡಿ.ಪಿ.ಆರ್ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸತೀಶ್ ಸ್ವಾಗತಿಸಿದರು, ಪಿಡಿಓ ಮಹೇಶ್ ನಿರೂಪಿಸಿ ವಂದಿಸಿದರು.