ಮೇ,20: ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆಯ ಬಳಿಕ, ಮೈತ್ರಿ ಸರ್ಕಾರ ರಚಿಸಲು ಜೆಡಿಎಸ್- ಕಾಂಗ್ರೆಸ್ ಸಿದ್ದವಾಗಿದ್ದು, ಬುಧವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತಂತೆ ರಾಜ್ಯಪಾಲ ವಜುಬಾಯ್ ವಾಲಾ ಭೇಟಿ ಮಾಡಿದ ಕುಮಾರಸ್ವಾಮಿ ಸರ್ಕಾರ ರಚಿಸಲು ಅವಕಾಶ ಕೇಳಿದ್ದಾರೆ. ವಾಲಾ ಸರ್ಕಾರ ರಚನೆಗೆ ಅನುಮೋದನೆ ನೀಡಿದ್ದು, ಬಹುಮತ ಸಾಬೀತಿಗೆ 15 ದಿನಗಳ ಕಾಲಾವಕಾಶ ನೀಡಿದ್ದಾರೆ.
ಇನ್ನು ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ, ಕಾಂಗ್ರೆಸ್ ಹಾಗೂ ಜೆಡಿಎಸ್ ಬಲ ಪ್ರದರ್ಶನಕ್ಕೆ ಪ್ರಮುಖ ವೇದಿಕೆಯಾಗಿ ಸಾಕ್ಷಿಯಾಗಲಿದೆ. ಈ ಸಮಾರಂಭಕ್ಕೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್ ಎಸ್ ಮುಖ್ಯಸ್ಥ ಕೆ ಚಂದ್ರಶೇಖರ ರಾವ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಉಪಸ್ಥಿತರಾಗುವ ಸಾಧ್ಯತೆ ಇದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಹಾಜರಾಗುವುದನ್ನು ಅಲ್ಲಗಳೆಯುವಂತಿಲ್ಲ.