ಮಂಗಳೂರು, ಅ. 17 (DaijiworldNews/SM): ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ಮಾಸ್ಕ್ ಧರಿಸುವುದನ್ನು ರಾಜ್ಯದಲ್ಲಿ ಕಡ್ಡಾಯಗೊಳಿಸಿದ್ದು, ದ.ಕ. ಜಿಲ್ಲೆಯಲ್ಲೂ ಈ ಆದೇಶ ಕಟ್ಟುನಿಟ್ಟಾಗಿ ಪಾಲಿಸುವ ಸಲುವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ.

ಮಾಸ್ಕ್ ಧರಿಸದೇ ಇದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಸ್ಥಳೀಯಾಡಳಿತದ ಅಧಿಕಾರಿಗಳು, ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ ಕಾರ್ಯಾಚರಣೆ ನಡೆಸುತ್ತಿದೆ. ಅಕ್ಟೋಬರ್ 17ರ ಶನಿವಾರದ ತನಕ ದ.ಕ ಜಿಲ್ಲೆಯಲ್ಲಿ ಒಟ್ಟು 8104 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ಇವರಿಂದ ಒಟ್ಟು 9,45,875 ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿದೆ ಎಂಬುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.
ಇನ್ನು ಜಿಲ್ಲೆಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಓಡಾಡುವವರು ಹಾಗೂ ಕಚೇರಿ, ಕಾರ್ಯಕ್ರಮಗಳಿಗೆ ತೆರಳುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕಾಗಿದೆ. ಬಸ್ ಸೇರಿದಂತೆ ಖಾಸಗಿ ವಾಹನಗಳಲ್ಲಿ ತೆರಳುವ ಸಂದರ್ಭದಲ್ಲೂ ಮಾಸ್ಕ್ ಧರಿಸುವುದು ಅಗತ್ಯವಾಗಿದೆ.