ಮಂಗಳೂರು, ಜೂ 01: ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷಗಾದಿ ಮತ್ತೊಮ್ಮೆ ಒಲಿದು ಬರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ಈ ಹಿಂದೆ ವಿಧಾನ ಪರಿಷತ್ ಸ್ಥಾನವನ್ನು ರೈ ಅವರಿಗೆ ನೀಡಬೇಕು ಎಂದು ಬೆಂಬಲಿಗರು ಒತ್ತಾಯಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಮುಖಂಡರು ಈ ಒತ್ತಾಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೀಗ ರೈ ಅವರಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ನೀಡಲು ಪಕ್ಷ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ವಿಧಾನ ಪರಿಷತ್ ಗೆ ನಡೆಯುವ ದ್ವೈ ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಸಿ.ಎಂ ಇಬ್ರಾಹಿಂ, ಅರವಿಂದ್ ಕುಮಾರ್ ಅರಳಿ, ಕೆ. ಗೋವಿಂದ ರಾಜ್ ಸೇರಿದಂತೆ ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಜೂ 11 ರಂದು ಚುನಾವಣೆ ನಡೆಯಲಿದೆ.
ಇದೀಗ ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ರೈ ಅವರಿಗೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ನೀಡುವ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿದೆ.